ADVERTISEMENT

ಹಲ್ಲೆ ಖಂಡಿಸಿ ಮಾಧ್ಯಮ ಪ್ರತಿನಿಧಿಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2012, 7:50 IST
Last Updated 14 ನವೆಂಬರ್ 2012, 7:50 IST

ಬಾಗಲಕೋಟೆ: ಜಿಲ್ಲೆಯ ಕಬ್ಬು ಬೆಳೆಗಾರರು ಇದೇ 10ರಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಹಾಗೂ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಜಿಲ್ಲಾಡಳಿತ ಭವನ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪತ್ರಕರ್ತರು ಮತ್ತು ಛಾಯಾಗ್ರಾಹಕರು ಜಿಲ್ಲಾಧಿಕಾರಿ ಎ.ಎಂ.ಕುಂಜಪ್ಪ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಳೆದ ಶನಿವಾರ ನಡೆದ ಕಬ್ಬು ದರ ನಿಗದಿ ಸಭೆಯ ವರದಿ ಮಾಡಲು ತೆರಳುತ್ತಿದ್ದ ಪತ್ರಿಕಾ ಛಾಯಾಗ್ರಾಹಕರು ಮತ್ತು ದೃಶ್ಯ ಮಾಧ್ಯಮದ ಪ್ರತಿನಿಧಿಗಳನ್ನು ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದ ಬಳಿ ಹಿಡಿದು ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಮತ್ತು ಛಾಯಾಗ್ರಾಹಕರೊಬ್ಬರ ಮರ್ಮಾಂಗ ವನ್ನು ಹಿಡಿದು ಘಾಸಿಗೊಳಿಸಿರುವುದನ್ನು ಮಾಧ್ಯಮ ಪ್ರತಿನಿಧಿಗಳು ತೀವ್ರವಾಗಿ ಖಂಡಿಸಿದರು.

ಹಲ್ಲೆ ನಡೆಯುತ್ತಿದ್ದ ಸಂದರ್ಭದಲ್ಲಿ ರಕ್ಷಣೆಗೆ ಧಾವಿಸಿದ ಪೊಲೀಸ್ ಸಿಬ್ಬಂದಿ ಮೇಲೂ ಹಲ್ಲೆ ನಡೆಸಲಾಗಿದೆ.  ಇಷ್ಟಕ್ಕೂ ಸುಮ್ಮನಿರದ ಉದ್ರಿಕ್ತ ಕಬ್ಬು ಬೆಳೆಗಾರರು ಜಿಲ್ಲಾಡಳಿತ ಭವನದಲ್ಲಿ ನಡೆಯುತ್ತಿದ್ದ ಸಭೆಯಲ್ಲೂ ಸಮರ್ಥಿಸಿಕೊಳ್ಳುವ ಮೂಲಕ ಪೂರ್ವ ನಿಯೋಜಿತವಾಗಿ ಕೃತ್ಯ ನಡೆಸಿರುವುದು ಸ್ಪಷ್ಟವಾಗುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ರೈತರ ಎಲ್ಲ ಹೋರಾಟಗಳಿಗೂ ಮಾಧ್ಯಮಗಳು ಸ್ಪಂದಿಸಿವೆ ಮತ್ತು ಹೋರಾಟದ ಪರವಾಗಿವೆ. ಇಷ್ಟಾದರೂ ಪಟ್ಟಭದ್ರ ಹಿತಾಸಕ್ತಿಗಳು ಪರಿಸ್ಥಿತಿಯ ಲಾಭ ಪಡೆದುಕೊಂಡು ಮಾಧ್ಯಮ ಪ್ರತಿನಿಧಿ ಗಳನ್ನು ಹಿಡಿದು ಥಳಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕಲ್ಲು ತೂರಿರುವ ಘಟನೆ ಅತ್ಯಂತ ಹೇಯಕರವಾಗಿದ್ದು, ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚಿಸಿ ರುವಂತೆ,  ಪೊಲೀಸರು ಸ್ವಯಂಪ್ರೇರಿತ ರಾಗಿ ದೂರು ದಾಖಲಿಸಿಕೊಳ್ಳಬೇಕು ಎಂದು ಮನವಿ ಮಾಡಲಾಯಿತು.

ಮನವಿ: ಕಳೆದ ವಾರ ಬಾಗಲಕೋಟೆ ವಿದ್ಯಾಗಿರಿಯ ಸೇಂಟ್ ಆ್ಯನ್ಸ್ ಸ್ಕೂಲ್‌ನಲ್ಲಿ ಮುಖ್ಯಶಿಕ್ಷಕಿಯು ವಿದ್ಯಾರ್ಥಿನಿ ಯೊಬ್ಬಳಿಗೆ ಬಾಸುಂಡೆ ಬರುವಂತೆ ಥಳಿಸಿದ ಘಟನೆಯನ್ನು ವರದಿ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿ ಗಳನ್ನು ಅವಾಚ್ಯವಾಗಿ ನಿಂದಿಸಿರುವುದು ಖಂಡನೀಯ. ಘಟನೆಯಲ್ಲಿ ಪತ್ರಕರ್ತರು ನಿಷ್ಪಕ್ಷಪಾತವಾಗಿದ್ದರೂ ವಿನಾಕಾರಣ ನಿಂದಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.