ADVERTISEMENT

ಸದಾಶಿವ ಆಯೋಗದ ವರದಿ ಶಿಫಾರಸಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಆ.2ರಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2018, 10:25 IST
Last Updated 22 ಸೆಪ್ಟೆಂಬರ್ 2018, 10:25 IST

ಬಾಗಲಕೋಟೆ: ‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಮಹಾಸಭಾದ ವತಿಯಿಂದಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 2 ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘಟನೆಯ ಮುಖಂಡ ರಾಜು ಮನ್ನಿಕೇರಿ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಹಿಂದಿನ ಯಾವುದೇ ರಾಜ್ಯ ಸರ್ಕಾರಗಳು ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲ. ಹಾಗಾಗಿ ಸಮ್ಮಿಶ್ರ ಸರ್ಕಾರದ ಮೇಲೆ ಒತ್ತಡ ಹೇರಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

‘ಮಾದಿಗರು ಸೇರಿದಂತೆ ಪರಿಶಿಷ್ಟ ಜಾತಿಯ ಹಲವು ಉಪಪಂಗಡಗಳು ಶೈಕ್ಷಣಿಕ, ರಾಜಕೀಯ ಹಾಗೂ ಸಾಮಾಜಿಕವಾಗಿ ಇನ್ನೂ ಹಿಂದುಳಿದಿವೆ. ಈ ಸಮುದಾಯಗಳಿಗೆ ಆಗಿರುವ ಅನ್ಯಾಯ ಸರಿಪಡಿಸಿ ಸಾಮಾಜಿಕ ನ್ಯಾಯ ಕಲ್ಪಿಸಬೇಕಾದರೆ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆಗೊಳ್ಳಬೇಕು. ಈ ಬಗ್ಗೆ ಮಹಾಸಭಾ ಕಳೆದ 25 ವರ್ಷಗಳಿಂದಲೂ ಹೋರಾಟ ನಡೆಸುತ್ತಲೇ ಇದೆ ಎಂದರು.

ADVERTISEMENT

ಪ್ರತಿಭಟನೆಯಲ್ಲಿ ಜಿಲ್ಲೆಯಿಂದ 50 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸೇರಿಸುವ ಯೋಜನೆ ಹೊಂದಲಾಗಿದೆ. ರಾಜ್ಯದ ವಿವಿಧೆಡೆಯಿಂದ ಐದು ಲಕ್ಷ ಮಂದಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

ವಕೀಲ ಶಿವಾನಂದ ಟವಳಿ ಮಾತನಾಡಿ, ‘ಮೊದಲು ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಿದ್ದೇವೆ.ಅಕ್ಟೋಬರ್ 12ರಂದು ನಂತರ, ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಲಿದ್ದೇವೆ. ಅಕ್ಟೋಬರ್ 17 ರಂದು 224 ಶಾಸಕರಿಗೆ ಮನವಿ ನೀಡಲಾಗುತ್ತಿದೆ. ಅಕ್ಟೋಬರ್ 22 ರಂದು ಬೆಂಗಳೂರು ಬಂದ್‌ಗೂ ಕರೆ ನೀಡಲಾಗಿದೆ. ಮರುದಿನದಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ’ ಎಂದು ಹೋರಾಟದ ರೂಪು ರೇಷೆಗಳ ಬಗ್ಗೆ ಮಾಹಿತಿ ನೀಡಿದರು.

ಮುಖಂಡರಾದ ಲಕ್ಷ್ಮಣ ಕಮತಗಿ, ಜಗದೀಶ ಹೊಸಮನಿ ಹಾಗೂ ಶಿವಾನಂದ ಕಂಬಳಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.