ADVERTISEMENT

ಬಾಗಲಕೋಟೆ: ₹10 ಸಾವಿರ ಗೌರವ ಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಎಲ್‌ಐಸಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 5:19 IST
Last Updated 16 ಜುಲೈ 2025, 5:19 IST
ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹10 ಸಾವಿರ ನೀಡುವ ಭರವಸೆ ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಸದಸ್ಯರು ಮಂಗಳವಾರ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು
ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹10 ಸಾವಿರ ನೀಡುವ ಭರವಸೆ ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಸದಸ್ಯರು ಮಂಗಳವಾರ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು   

ಬಾಗಲಕೋಟೆ: ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹10 ಸಾವಿರ ನೀಡುವುದಾಗಿ ನೀಡಿದ್ದ ಭರವಸೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ನವನಗರದ ಎಲ್‌ಐಸಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರ‍್ಯಾಲಿಯಲ್ಲಿ ಬಂದ ಆಶಾ ಕಾರ್ಯಕರ್ತೆಯರು ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

ಪ್ರತಿ ತಿಂಗಳು ₹10 ಸಾವಿರ ಗೌರವ ಧನ ನೀಡುವ ಆದೇಶ ಮಾಡುವುದಾಗಿ ಹೇಳಲಾಗಿತ್ತು. ಆದರೆ,  ಇಲ್ಲಿಯವರೆಗೆ ಆದೇಶ ಮಾಡಿಲ್ಲ. ಬಿಟ್ಟಿ ಕೆಲಸ ಮಾಡಿಸದೇ, ಮಾಡಿದ ಕೆಲಸಕ್ಕೆ ಗೌರವ ಧನ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಮಾತನಾ‌‌ಡಿ, ಕಳೆದ ಜನವರಿಯಲ್ಲಿ ನಡೆದ ಬ್ರಹತ್ ಅಹೋರಾತ್ರಿ ಪ್ರತಿಭಟನೆ ವೇಳೆ ಇನ್ನು ಮುಂದೆ ಪ್ರತಿ ತಿಂಗಳು ₹10 ಸಾವಿರ ಗೌರವ ಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಅದರಂತೆ ಆದೇಶ ಮಾಡಬೇಕು ಎಂದು ಒತ್ತಾಯಿಸಿದರು.

ಬೆಂಚ್ ಮಾರ್ಕ್ ಮೌಲ್ಯಮಾಪನ ಪದ್ಧತಿ ಕೈಬಿಡಬೇಕು. ಈ ವರ್ಷದ ಬಜೆಟ್‌‌ನಲ್ಲಿ ಘೋಷಣೆ  ಮಾಡಿದ ಹೆಚ್ಚುವರಿ ಪ್ರತಿ ತಿಂಗಳ ₹1 ಸಾವಿರ ಗೌರವ ಧನವನ್ನೂ ಬಿಡುಗಡೆ ಮಾಡಬೇಕು ಎಂದು ಆ್ರಹಿಸಿದರು.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಗೌರವ ಅಧ್ಯಕ್ಷರಾದ ಅಂಜನಾ ಕುಂಬಾರ, ಸೈನಾಜ ಜಂಗಿ, ಸುರೇಖಾ ಕಾಳೆ, ಮಂಜುಳಾ ಸರಕರಿ, ಬಸಮ್ಮ ಬೂಪರದ, ವಾಸಂತಿ ಪುಜಾರಿ, ಸುನಿತಾ ಜಂಬಗಿ, ದಾನಮ್ಮ ವಜ್ರಮಟ್ಟಿ, ಗಂಗಮ್ಮ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.