ADVERTISEMENT

ಬಾಗಲಕೋಟೆ: ಪ್ರವಾಹ ಪೂರ್ವ ಸಿದ್ಧತೆ ವೀಕ್ಷಿಸಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 3:12 IST
Last Updated 6 ಜುಲೈ 2025, 3:12 IST
ಬಾಗಲಕೋಟೆಯ ಅನಗವಾಡಿ ಸೇತುವೆ ಬಳಿ ಶನಿವಾರ ಬೋಟ್‌ನಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಸಂಗಪ್ಪ, ಎಸ್‌ಪಿ ಅಮರನಾಥ ರೆಡ್ಡಿ ನದಿ ವೀಕ್ಷಿಸಿದರು
ಬಾಗಲಕೋಟೆಯ ಅನಗವಾಡಿ ಸೇತುವೆ ಬಳಿ ಶನಿವಾರ ಬೋಟ್‌ನಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಸಂಗಪ್ಪ, ಎಸ್‌ಪಿ ಅಮರನಾಥ ರೆಡ್ಡಿ ನದಿ ವೀಕ್ಷಿಸಿದರು   


ಬಾಗಲಕೋಟೆ:
ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆಗಾಗಿ ಕೈಗೊಳ್ಳಬೇಕಾಗಿರುವ ಮುನ್ನಚ್ಚರಿಕೆ ಕ್ರಮಗಳು, ವಿಪತ್ತು ನಿರ್ವಹಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಮೂರು ಕಡೆಗಳಲ್ಲಿ ಶನಿವಾರ ಅಣಕು ಪ್ರದರ್ಶನ ನಡೆಸಲಾಯಿತು.

ಜಿಲ್ಲಾಡಳಿತ, ಅಗ್ನಿಶಾಮಕದಳ, ಗೃಹರಕ್ಷಕ ದಳ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಬದಾಮಿಯ ಅಗಸ್ತ್ಯ ತೀರ್ಥ ಹೊಂಡ, ಮುಧೋಳ ತಾಲ್ಲೂಕಿನ ಯಾದವಾಡ ಸೇತುವೆ ಹಾಗೂ ಜಮಖಂಡಿ ತಾಲ್ಲೂಕಿನ ಶೂರ್ಪಾಲಿಯಲ್ಲಿ ಅಣಕು ಪ್ರದರ್ಶನದಲ್ಲಿ ಎದುರಾಗುವ ವಿಪತ್ತು, ಅಪಾಯಕ್ಕೆ ಸಿಲುಕಿರುವ ಜನರ ರಕ್ಷಣೆ ಮಾಡುವ ಕಾರ್ಯಾಚರಣೆ ಪ್ರಾತ್ಯಕ್ಷಿಕೆ ಪ್ರದರ್ಶಿಸಲಾಯಿತು.

ನದಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡುವುದು, ಆಸ್ಪತ್ರೆಗೆ ಕಳುಹಿಸುವ ಸನ್ನಿವೇಶ, ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ದೋಣಿಯಲ್ಲಿ ರಕ್ಷಣೆ ಮಾಡುವ ಪ್ರಾತ್ಯಕ್ಷಿಕೆ ಪ್ರದರ್ಶಿಸಲಾಯಿತು. ನಂತರ ಸಿದ್ದರಾಮೇಶ್ವರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಿದ್ಧತೆ ಮಾಡಿಕೊಂಡಿರುವ ಕಾಳಜಿ ಕೇಂದ್ರಕ್ಕೆ ತೆರಳಿ ಸೌಲಭ್ಯಗಳ ಪರಿಶೀಲನೆ ಮಾಡಲಾಯಿತು.

ADVERTISEMENT

ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ನಿರ್ವಹಣೆಗೆ ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಎಲ್ಲ ರೀತಿಯಿಂದ ಜಿಲ್ಲಾಡಳಿತ ಸನ್ನದ್ಧವಾಗಿದ್ದು, ಪೊಲೀಸ್ ಹಾಗೂ ಅಗ್ನಿಶಾಮಕ ದಳ ಕಾರ್ಯಾಚರಣೆಗೆ ಸಜ್ಜುಗೊಂಡಿದ್ದಾರೆ. ಜನರು ಪ್ರವಾಹ ಪರಿಸ್ಥಿತಿಯಲ್ಲಿ ನೀರಿಗೆ ಇಳಿಯುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹ ಉಂಟಾಗುವ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಯ ಪಾತ್ರದಲ್ಲಿ ಪ್ರವಾಹ ಉಂಟಾದಾಗ ರಕ್ಷಣೆ ಕಾರ್ಯಾಚಾರಣೆ ಅಣಕು ಪ್ರದರ್ಶನ ನಡೆಸಲಾಗುತ್ತಿದೆ. ಎಲ್ಲೆಲ್ಲಿ ಪ್ರವಾಹ ಉಂಟಾಗುತ್ತದೆ. ಎಷ್ಟು ಸೇತುವೆಗಳು ಮುಳುಗಡೆಯಾಗುತ್ತವೆ ಎಂಬುದನ್ನು ಗುರುತಿಸಿಕೊಂಡು ಆ ವ್ಯಾಪ್ತಿಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಮುಧೋಳ ನಗರಸಭೆ ಅಧ್ಯಕ್ಷೆ ಸುನಂದಾ ತೇಲಿ, ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಶೀಲ್ದಾರ್ ಮಹಾದೇವ ಸಣಮುರಿ, ಜಮಖಂಡಿ ಡಿವೈಎಸ್‍ಪಿ ಮಹಮ್ಮದ್ ರೋಷನ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ, ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ಉಪಸ್ಥಿತರಿದ್ದರು.

ಬೋಟ್ ಏರಿದ ಡಿಸಿ, ಎಸ್‌ಪಿ
ಬಾಗಲಕೋಟೆ: ಜಿಲ್ಲೆಯ ಅನಗವಾಡಿ ಸೇತುವೆ ಬಳಿ ನದಿ ವೀಕ್ಷಣೆಗಾಗಿ ಜಿಲ್ಲಾಧಿಕಾರಿ ಸಂಗಪ್ಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಕಾಶ ಪಮ್ಮಾರ ಮುಧೋಳ ನಗರಸಭೆ ಅಧ್ಯಕ್ಷೆ ಸುನಂದ ತೇಲಿ ಮತ್ತಿತರರು ಬೋಟ್‌ನಲ್ಲಿ ಸಂಚರಿಸಿ ವೀಕ್ಷಣೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.