ADVERTISEMENT

ಬಾಗಲಕೋಟೆ | ಪಡಿತರ ಧಾನ್ಯ ದುರುಪಯೋಗವಾದರೆ ಕ್ರಮ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 2:43 IST
Last Updated 9 ಡಿಸೆಂಬರ್ 2025, 2:43 IST
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿದರು
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿದರು   

ಬಾಗಲಕೋಟೆ: ಸರ್ಕಾರ ನೀಡುವ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಹಾರಧಾನ್ಯ ಕಾಳಸಂತೆ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೇರಿದಂತೆ ಕೃಷಿ ಮಾರುಕಟ್ಟೆ, ಕಾನೂನು ಮಾಪನ ಶಾಸ್ತ್ರ, ಕಂದಾಯ ಹಾಗೂ ಇತರೆ ಇಲಾಖೆ ಅಧಿಕಾರಿಗಳ ತಂಡ ರಚಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ ತಂಡ ರಚಿಸಲಾಗಿದೆ ಎಂದರು.

ತಾಲ್ಲೂಕು ಮಟ್ಟದಲ್ಲಿ ಕಂದಾಯ, ಆಹಾರ, ಪೊಲೀಸ್, ಎಪಿಎಂಸಿ, ಕೃಷಿ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯವರು ಜಂಟಿಯಾಗಿ ದಾಳಿ ಮಾಡಿ, ಪ್ರಕರಣ ದಾಖಲಿಸಲು ಮುಂದಾಗಬೇಕು. ಅಲ್ಲದೇ ಹೋಟೆಲ್‌ಗಳಿಗೆ ಭೇಟಿ ನೀಡಿ, ಆಹಾರದ ಗುಣಮಟ್ಟ ಹಾಗೂ ಗೃಹೋಪಯೋಗಿ ಸಿಲಿಂಡರ್‌ಗಳ ಬಳಕೆ ಮಾಡುತ್ತಿರುವುದು ಕಂಡುಬಂದಲ್ಲಿ ಅದನ್ನು ಜಪ್ತಿ ಮಾಡಬೇಕು ಎಂದು ಸೂಚನೆ ನೀಡಿದರು.

ADVERTISEMENT

ಸರ್ಕಾರ ನೀಡುವ ಉಚಿತ ಅಕ್ಕಿಯನ್ನು ಲಾಭಕ್ಕಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ, ಅಂತವರ ಪಡಿತರ ಚೀಟಿ ರದ್ದು ಪಡಿಸಲಾಗುವುದು. ದಂಡ ವಿಧಿಸಲಾಗುವುದು. ಈಗಾಗಲೇ ದಾಖಲಾಗಿರುವ ಪ್ರಕರಣಗಳು ನ್ಯಾಯಾಲಯದಲ್ಲಿ ಯಾವ ಹಂತದಲ್ಲಿವೆ ಎಂಬ ಮಾಹಿತಿ ಸಂಗ್ರಹಿಸುವಂತೆ ಆಹಾರ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರುಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ಪ್ರಕರಣ ದಾಖಲಿಸುವ ಸಮಯದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು. ಆರೋಪಿಗಳ ವಿರುದ್ಧ ನಿಯಮಾನುಸಾರ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗುವುದು. ಜಂಟಿಯಾಗಿ ದಾಳಿ ಮಾಡುವ ಸಮಯದಲ್ಲಿ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಶಶಿಧರ ಕುರೇರ ಮಾತನಾಡಿ, ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರಾತಿ ನೀಡುವಲ್ಲಿ ಪರಿಶಿಷ್ಟ ಜಾತಿಗೆ ಶೇ17 ಮತ್ತು ಪಂಗಡದ ಜನಾಂಗದವರಿಗೆ ಶೇ7ರಷ್ಟು ನಿಯಮಾನುಸಾರ ಆದ್ಯತೆ ನೀಡುವ ಕುರಿತು ಸರಕಾರದಿಂದ ಸಮಿತಿ ರಚನೆ ಮಾಡಲಾಗಿದ್ದು, ಇದರನ್ವಯ ಮಂಜೂರಾತಿಗೆ ಕ್ರಮಕೈಗೊಳ್ಳಬೇಕು. ಅಲ್ಲದೇ ಈಗಾಗಲೇ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪರಿಶೀಲಿಸಿ, ಪಡಿತರ ಚೀಟಿ ವಿತರಿಸುವ ಹಾಗೂ ಅನರ್ಹ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಲು ತಿಳಿಸಿದರು. 

ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕೃಷಿ ಜಂಟಿ ನಿರ್ದೇಶಕ ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಮೇಶ ಚವ್ಹಾಣ, ನಗರಸಭೆ ಪೌರಾಯುಕ್ತ ವಾಸಣ್ಣ ಆರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.