
ಬಾಗಲಕೋಟೆ: ಮುಂಬರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಬಾಗಲಕೋಟೆ ತಹಶೀಲ್ದಾರ್ ಕಚೇರಿಯ ಚುನಾವಣಾ ವಿಭಾಗಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಸಂಗಪ್ಪ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದರು.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಸ್ವೀಕೃತಿಯಾಗಿರುವ ನಮೂನೆ 6, 7 ಮತ್ತು 8ಕ್ಕೆ ಸಂಬಂಧಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ನಿಗದಿತ ಅವಧಿಯಲ್ಲಿ ವಿಲೇವಾರಿಗೊಳಿಬೇಕು. ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಉಪಚುನಾವಣೆಯನ್ನು ಶಾಂತಿಯುತವಾಗಿ ಯಶಸ್ವಿಯಾಗಿ ಜರುಗಿಸುವ ನಿಟ್ಟಿನಲ್ಲಿ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು. ಅರ್ಜಿಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ನೋಡಬೇಕು ಎಂದು ತಹಶೀಲ್ದಾರ್ ವಾಸುದೇವ ಸ್ವಾಮಿ ಅವರಿಗೆ ತಿಳಿಸಿದರು.
ಮತದಾರರ ಪಟ್ಟಿಯು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು, ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತರಾಗಬಾರದು. ಈ ಬಗ್ಗೆ ನಿರ್ಲಕ್ಷ ವಹಿಸದೇ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕಾಲ, ಕಾಲಕ್ಕೆ ನೀಡುವ ನಿರ್ದೇಶನಗಳನ್ನು ಪಾಲಿಸಬೇಕು ಎಂದು ತಹಶೀಲ್ದಾರ್ ಮತ್ತು ಚುನಾವಣಾ ವಿಭಾಗದ ಸಿಬ್ಬಂದಿಗೆ ಸೂಚಿಸಿದರು.
ನಂತರ ಕಚೇರಿಯ ಸಿಬ್ಬಂದಿ ಶಾಖೆಗೆ ಭೇಟಿ ನೀಡಿದ ಅವರು, ವಿವಿಧ ಶಾಖೆಗಳ ಕಡತಗಳನ್ನು ಪರಿಶೀಲಿಸಿ ಬಾಕಿ ಉಳಿದ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರ ಕುಂದುಕೊರತೆಗಳನ್ನು ಆಲಿಸಬೇಕು. ಎಂದು ಹೇಳಿದರು.
ಜನರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವ ಕೆಲಸ ಆಗಬೇಕು. ಕಚೇರಿಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮತ್ತು ಕಚೇರಿಯ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ್ ಮಹಾದೇವ ಸ್ವಾಮಿ, ಗ್ರೇಡ್-2 ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ, ಜಿಲ್ಲಾಧಿಕಾರಿ ಕಾರ್ಯಾಲಯದ ಚುನಾವಣಾ ಶಿರಸ್ತೇದಾರ ಮಹೇಶ ಪಾಂಡವ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.