
ಬಾಗಲಕೋಟೆ: ಜಿಲ್ಲೆಯಾದ್ಯಂತ ಫೆ.28 ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿ ಸೋಮವಾರ ಜರುಗಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪೂರ್ವಸಿದ್ದತಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 27009 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದಕ್ಕಾಗಿ ಜಿಲ್ಲೆಯಾದ್ಯಂತ 165 ಕಾಲೇಜುಗಳಲ್ಲಿ 39 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಿಸಬೇಕು ಎಂದು ಸೂಚಿಸಿದರು.
ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಕ್ಕೆ ನೇಮಕಗೊಂಡ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು, ಪ್ರಶ್ನೆ ಪತ್ರಿಕೆ ವಿತರಕರ ತಂಡ, ಸಿಟಿಂಗ್ ಸ್ಕ್ವಾಡ್, ಜಿಲ್ಲಾ ಜಾಗೃತ ದಳದವರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಇಲಾಖೆಯಿಂದ ನೀಡಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಬಳಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಹೊರತುಪಡಿಸಿ ಬೇರೆಯವರ ಪರೀಕ್ಷಾ ಕೇಂದ್ರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದರು.
ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ ಆಯಾ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ಕೆಲಸ ಆಗಬೇಕು. ಪರೀಕ್ಷಾ ಕಾರ್ಯಕ್ಕೆ ನೀಡಲಾದ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉತ್ತಮವಾದ ಡೆಸ್ಕ್, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದಲ್ಲಿ ಮಾಡಲಾದ ಆಸನಗಳ ವ್ಯವಸ್ಥೆ ಬಗ್ಗೆ ಸೂಚನಾ ಫಲಕದಲ್ಲಿ ಅಂಟಿಸಬೇಕು. ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವಾಗ, ಉತ್ತರ ಪತ್ರಿಕೆ ಸ್ವೀಕರಿಸುವ, ಬಂಡಲ್ ಮಾಡುವುದು ಸೇರಿದಂತೆ ಇತರೆ ಪ್ರಕ್ರಿಯೆಗಳನ್ನು ಸಿಸಿಟಿವಿ ಕಣ್ಗಾವಲಿನಲ್ಲಿಯೇ ನಡೆಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರೆ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಇ-ಕ್ಯಾಮೆರಾ, ಲ್ಯಾಪ್‌ಟಾಪ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷೆಗಳನ್ನು ಸುಸೂತ್ರವಾಗಿ ಜರುಗಿಸಲು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಝೆರಾಕ್ಸ್ ಅಂಗಡಿಗಳಿದ್ದಲ್ಲಿ ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕು ಎಂದರು.
ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ತಹಶೀಲ್ದಾರರಾದ ವಾಸುದೇವಸ್ವಾಮಿ, ವಿನೋದ, ಗಿರೀಶ ಸ್ವಾದಿ, ಚಿಕ್ಕಪ್ಪ ನಾಯಕ, ಅನೀಲ ಮೇತ್ರಿ, ಡಿವೈಎಸ್‍ಪಿ ಗಜಾನನ ಸುತಾರ ಇದ್ದರು.
ಮೊಬೈಲ್‌ಗೆ ಅವಕಾಶವಿಲ್ಲ 200 ಮೀಟರ್‌ವರೆಗೆ ನಿಷೇಧ ಪಾರದರ್ಶಕವಾಗಿ ಪರೀಕ್ಷೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.