ADVERTISEMENT

ನರೇಗಾ ದುರ್ಬಲಗೊಳಿಸಲು ಬಿಡೆವು: ವಿನಯಕುಮಾರ ಸೊರಕೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 8:27 IST
Last Updated 24 ಜನವರಿ 2026, 8:27 IST
ಬಾಗಲಕೋಟೆಯಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿ ರಾಜ್ಯ ಅಧ್ಯಕ್ಷ ವಿನಯಕುಮಾರ ಸೊರಕೆ ಉದ್ಘಾಟಿಸಿದರು
ಬಾಗಲಕೋಟೆಯಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿ ರಾಜ್ಯ ಅಧ್ಯಕ್ಷ ವಿನಯಕುಮಾರ ಸೊರಕೆ ಉದ್ಘಾಟಿಸಿದರು   

ಬಾಗಲಕೋಟೆ: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಜೀವನಾಧಾರವಾಗಿದ್ದು, ಅದನ್ನು ದುರ್ಬಲಗೊಳಿಸುವ ಕ್ರಮಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿ ರಾಜ್ಯ ಅಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಶುಕ್ರವಾರ ನವನಗರದ ಮಹಾತ್ಮ ಗಾಂಧಿ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ನರೇಗಾ ಯೋಜನೆಯಲ್ಲಿ ಬದಲಾವಣೆ ಮಾಡುವ ಮೂಲಕ ದುಡಿಯುವ ವರ್ಗಕ್ಕೆ ಉದ್ಯೋಗ ಸಿಗದಂತೆ ಮಾಡಲು ಹೊರಟಿದೆ ಎಂದು ಟೀಕಿಸಿದರು.

ಸಹ ಅಧ್ಯಕ್ಷ ಎಲ್. ಹನುಮಂತಯ್ಯ ಮಾತನಾಡಿ, ಸಂವಿಧಾನಾತ್ಮಕ ಮೌಲ್ಯಗಳನ್ನು ರಕ್ಷಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ADVERTISEMENT

ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ನಾಗರಾಜ ಹದ್ಲಿ ಮಾತನಾಡಿ, ಪಕ್ಷದ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು. ಕಾಂಗ್ರೆಸ್‌ನ ತತ್ವ ಹಾಗೂ ಗ್ಯಾರಂಟಿ ಸೇರಿದಂತೆ ಜಾರಿಗೊಳಿಸಲಾಗಿರುವ ವಿವಿಧ ಯೋಜನೆಗಳ ಬಗ್ಗೆ ತಿಳಿಸಬೇಕು ಎಂದರು.

ಮುಖ್ಯ ಸಂಯೋಜಕ ಸುಧೀರಕುಮಾರ ಮುರೊಳ್ಳಿ ಮಾತನಾಡಿ, ಕೋಮುವಾದಿ ರಾಜಕಾರಣದಿಂದ ದೇಶದ ಏಕತೆ ಮತ್ತು ಸಹಬಾಳ್ವೆಗೆ ಅಪಾಯ ಉಂಟಾಗುತ್ತದೆ. ಕೋಮುವಾದಿ ರಾಜಕಾರಣದಿಂದ ಆಗುವ ಅಪಾಯಗಳ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.

ಉಪಾಧ್ಯಕ್ಷ ಅಬ್ದುಲ್ ಮುನೀರ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಸ್‌ಐಾರ್‌, ಬಿಎಲ್‌ಒಗಳ ಪಾತ್ರ ಪ್ರಮುಖವಾಗಿರುತ್ತದೆ. ಅವರಿಗಿರುವ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಿದರು.

ಮುಖ್ಯ ಸಂಯೋಜಕ ಶರಣಪ್ಪ ಕೊಟಗಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದಯಾನಂದ ಪಾಟೀಲ, ಮುಖಂಡ ಮಲ್ಲಿಕಾರ್ಜುನ ಹುಲ್ಲಪ್ಪ ಮೇಟಿ ಮಾತನಾಡಿ, ಪಕ್ಷದ ಸಂಘಟನೆ ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಮುಖಂಡ ಉಮೇಶ ಮೇಟಿ, ಸಂಯೋಜಕ ಪಿ.ಕೆ. ನೀರಲಕಟ್ಟಿ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.