ಬೀಳಗಿ: ಶುಭ ಸಮಾರಂಭಗಳ ಮತ್ತು ಇನ್ನಿತರ ಸಮಾರಂಭಗಳ ಯಶಸ್ವಿಯಲ್ಲಿ ಕೊರಮ ಸಮಾಜದವರ ಪಾತ್ರ ಪ್ರಮುಖವಾಗಿರುತ್ತದೆ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಸನಾದಿ ಅಪ್ಪಣ್ಣ ಕಲಾಕಾರರ ಸಂಘ ಬೀಳಗಿ ಇವರ ಸಂಯುಕ್ತ ಆಶ್ರಯದಲ್ಲಿ ಕೊರ್ತಿ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ ಸ್ವರಸಾಮ್ರಾಟ ಸನಾದಿ ಅಪ್ಪಣ್ಣನವರ 150ನೇ ಜಯಂತಿ ಹಾಗೂ ಸಂಘದ 35ನೇ ವಾರ್ಷಿಕೋತ್ಸವದ ಪ್ರಯುಕ್ತ ಏರ್ಪಡಿಸಿದ ಸಾಂಸ್ಕೃತಿಕ ಸಂಭ್ರಮ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜ ಸಂಘಟನೆಯೊಂದಿಗೆ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಮುಂದುವರಿಯಬೇಕು. ಶಹನಾಯಿ ಮಾಂತ್ರಿಕ ಸನಾದಿ ಅಪ್ಪಣ್ಣ ಅವರ ಜಯಂತ್ಯೋತ್ಸವ ಸಮಾರಂಭಕ್ಕೆ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಬೇಕು. ಇದು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಮಾತನಾಡಿ, ಸಮಾಜದಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಸಣ್ಣ ಸಣ್ಣ ಸಮಾಜಗಳು ಬೃಹತ್ ಶಕ್ತಿ ಪ್ರದರ್ಶನ ಮಾಡಬೇಕು ಎಂದರು. ರಾಜ್ಯ ನೀರಾವರಿ ನಿಗಮದ ವ್ಯವಸ್ಥಾಪಕ ರಾಜೇಶ ಅಮ್ಮಿನಬಾವಿ, ಎಸ್.ಸಿ, ಎಸ್.ಟಿ ನಿಗಮದ ರಾಜ್ಯ ಕಾರ್ಯದರ್ಶಿ ಏಕಲವ್ಯ ಮಾತನಾಡಿದರು.
ಬೀಳಗಿ ಗುರುಪಾದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ವಿನೋದ ಹತ್ತಳ್ಳಿ, ಕೊಪ್ಪಳ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಕಿಶೋರಿ ಬೂದನೂರ, ಕೊರಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಭಜಂತ್ರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.