ಬಾಗಲಕೋಟೆ: ನಿಗದಿತ ಅವಧಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡದೇ ಬೇಜವಾಬ್ದಾರಿ ತೋರಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆಯ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಡಗಳ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಅಧಿಕಾರಿ ಹಾಗೂ ಸಿಬ್ಬಂದಿ ಬೇಜವಾಬ್ದಾರಿಯಿಂದ ಪ್ರಗತಿ ಕುಂಠಿತವಾಗಿದೆ. ರಜೆ ನಗದೀಕರಣ, ಕಾಲಮಿತಿ ಬಡ್ತಿ ಸೇರಿದಂತೆ ಇತರೆ ಕೆಲಸಗಳಲ್ಲಿ ವಿಳಂಬ ಧೋರಣೆ ಆಗುತ್ತಿದೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.
ಕೊಠಡಿ ನಿರ್ಮಾಣ, ಶಾಲಾ ದುರಸ್ತಿ, ಶೌಚಾಲಯ ನಿರ್ಮಾಣ ಸೇರಿದಂತೆ ಇತರೆ ಕಾಮಗಾರಿ ಕೈಗೊಳ್ಳಲು ವಿಶೇಷ ಅನುದಾನದಡಿ ₹4.80 ಕೋಟಿ ಜಿಲ್ಲೆಗೆ ಬಿಡುಗಡೆಯಾಗಿದೆ. ಈ ಅನುದಾನದ ಖರ್ಚಾದ ಬಗ್ಗೆ ಮಾಹಿತಿ ಕೇಳಿದಾಗ ಸರಿಯಾದ ಉತ್ತರ ದೊರೆಯಲಿಲ್ಲ. ಅಧಿಕಾರಿಗಳ ನಿರ್ಲಕ್ಷತನ ಎದ್ದು ಕಾಣುತ್ತಿದೆ. ಅನುದಾನದ ಬಗ್ಗೆ ಮಾಹಿತಿ ನೀಡುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಕಳೆದ ಸಾಲಿನಲ್ಲಿ ಕೈಗೊಂಡ ದುರಸ್ತಿ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆ ನಡೆಸಬೇಕು. ಗುಣಮಟ್ಟದ ಶೂಗಳನ್ನು ಖರೀದಿಸಿ ವಿತರಣೆ ಮಾಡಿ. ಖರೀದಿಯಲ್ಲಿ ಯಾವುದೇ ರೀತಿ ಲೋಪ ಆಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಶಾಲೆಯಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹಾಜರಾತಿ ಇರಬೇಕು. ಹೆಚ್ಚಿನ ಗೈರಾಗುವ ಮಕ್ಕಳು ಇದ್ದಲ್ಲಿ ಅವರನ್ನು ಮನವೋಲಿಸಿ ಮರಳಿ ಶಾಲೆಗೆ ಕರೆ ತರಬೇಕು. ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಕಲಿಕೆ ಸುಧಾರಣೆಗೆ ಶಿಕ್ಷಕರು ಶ್ರಮಿಸಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಎಸ್.ಜಿ.ಮಿರ್ಜಿ, ಇಳಕಲ್ ಡಯಟ್ ಪ್ರಾಚಾರ್ಯ ಶೇಖರಪ್ಪ ಬಳಬಟ್ಟಿ, ಸರ್ವಶಿಕ್ಷಣ ಅಭಿಯಾನದ ಉಪ ಸಮನ್ವಯಾಧಿಕಾರಿ ಸಿ.ಆರ್.ಓಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.