ADVERTISEMENT

ನವೆಂಬರ್‌ನಲ್ಲಿ ಚಾಲುಕ್ಯ ಉತ್ಸವ: ಸಚಿವ ಆರ್.ಬಿ. ತಿಮ್ಮಾಪುರ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 4:45 IST
Last Updated 9 ಸೆಪ್ಟೆಂಬರ್ 2025, 4:45 IST
ಬಾಗಲಕೋಟೆಯಲ್ಲಿ ಸೋಮವಾರ ನಡೆದ ಚಾಲುಕ್ಯ ಉತ್ಸವ ಕುರಿತ ಸಭೆಯಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿದರು
ಬಾಗಲಕೋಟೆಯಲ್ಲಿ ಸೋಮವಾರ ನಡೆದ ಚಾಲುಕ್ಯ ಉತ್ಸವ ಕುರಿತ ಸಭೆಯಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿದರು   

ಬಾಗಲಕೋಟೆ: ನಾಡಿನ ಸಂಸ್ಕೃತಿ ಮತ್ತು ಪರಂಪರೆ ಬಿಂಬಿಸುವ ಚಾಲುಕ್ಯ ಉತ್ಸವವನ್ನು ನವೆಂಬರ್‌ ತಿಂಗಳಿನಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಚಾಲುಕ್ಯ ಉತ್ಸವ ಕಾರ್ಯಕ್ರಮ ಆಯೋಜನೆ ಕುರಿತು ಜರುಗಿದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಐತಿಹಾಸಿಕ ತಾಣಗಳಾದ ಬಾದಾಮಿ, ಪಟ್ಟದಕಲ್ ಹಾಗೂ ಐಹೊಳೆಯಲ್ಲಿ ತಲಾ ಒಂದು ದಿನ ಉತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಬರುವ ದಿನಾಂಕ ತಿಳಿಸುತ್ತಿದ್ದಂತೆಯೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮ ಆಯೋಜನೆಗೆ ತಗಲುವ ಅಂದಾಜು ವೆಚ್ಚ ನಿರ್ಧರಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಂಟಿಯಾಗಿ ಸಭೆ ನಡೆಸಲು ತಿಳಿಸಿದ ಅವರು, ಬಜೆಟ್‍ನಲ್ಲಿ ಚಾಲುಕ್ಯ ಉತ್ಸವ ಆಯೋಜಿಸಲು ₹2 ಕೋಟಿ ಅನುದಾನ ಮೀಸಲಿಟ್ಟಿದೆ. ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಿದಲ್ಲಿ ಬಿಡುಗಡೆಗೆ ಕ್ರಮ ವಹಿಸಲಾಗುವುದು. ವಿವಿಧ ಮೂಲಗಳಿಂದ ಸಂಪನ್ಮೂಲ ಸಂಗ್ರಹಿಸಬೇಕು. ಪ್ರವಾಸೋದ್ಯಮ, ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರಕ್ಕೂ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ತಿಳಿಸಿದರು.

ADVERTISEMENT

ಉತ್ಸವದಲ್ಲಿ ನಾಡಿನ ಕಲೆ, ಸಂಸ್ಕೃತಿ ಬಿಂಬಿಸುವಂತಹ ಕಾರ್ಯಕ್ರಮಗಳಿರಬೇಕು. ಸ್ಥಳೀಯ ಕಲಾವಿದರಿಗೆ ಶೇ50 ಹಾಗೂ ಬೇರೆ ರಾಜ್ಯ, ರಾಷ್ಟ್ರದ ಕಲಾವಿದರಿಗೆ ಶೇ50 ರಷ್ಟು ಅವಕಾಶ ಕಲ್ಪಿಸುವ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂದರು.

ಮೂರು ದಿನಗಳ ಸಂಗೀತ ನೃತ್ಯೋತ್ಸವದಲ್ಲಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಕಲಾವಿದರು, ಸಂಗೀತಗಾರರು, ನೃತ್ಯ ತಂಡಗಳು ಕರೆಯಿಸುವುದಲ್ಲದೇ ಚಾಲುಕ್ಯರ ನಾಡಿನ ಐತಿಹಾಸಿಕ ಪರಂಪರೆ ಕುರಿತ ವಿಚಾರಗೋಷ್ಠಿ, ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲು ಸೂಚಿಸಿದರು. 

ಶಾಸಕರಾದ ಎಚ್.ವೈ. ಮೇಟಿ, ಜೆ.ಟಿ. ಪಾಟೀಲ, ಭೀಮಸೇನ ಚಿಮ್ಮನಕಟ್ಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಅಧಿಕಾರಿಗಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.