ADVERTISEMENT

ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ: ಶೇಖರಗೌಡ ರಾಮತ್ನಾಳ

ಮಕ್ಕಳ ಹಕ್ಕುಗಳು ಮತ್ತು ಕಾನೂನುಗಳ ಕುರಿತ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 8:05 IST
Last Updated 24 ಡಿಸೆಂಬರ್ 2025, 8:05 IST
   

ಬಾಗಲಕೋಟೆ: ‘ಮಕ್ಕಳ ಹಕ್ಕುಗಳ ರಕ್ಷಣೆ ಕೇವಲ ಒಂದೇ ಇಲಾಖೆಯ ಜವಾಬ್ದಾರಿಯಾಗದೇ, ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ಜಿಲ್ಲಾಡಳಿತದ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಂಗಳವಾರ ಎಂ.ಆರ್.ಡಬ್ಲು, ಯು.ಆರ್.ಡಬ್ಲು. ಹಾಗೂ ವಿ.ಆರ್.ಡಬ್ಲು ಕಾರ್ಯಕರ್ತರಿಗಾಗಿ ಆಯೋಜಿಸಲಾಗಿದ್ದ ಮಕ್ಕಳ ಹಕ್ಕುಗಳು ಮತ್ತು ಕಾನೂನುಗಳ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕರ್ತರು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆ ಅಥವಾ ದೌರ್ಜನ್ಯ ಸಂಭವಿಸಿದಾಗ ಗ್ರಾಮೀಣ ಮಟ್ಟದ ಕಾರ್ಯಕರ್ತರು ಮೊದಲ ಪ್ರತಿಸ್ಪಂದಕರಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

ADVERTISEMENT

‘ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ಎಂಬ ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನೆಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಅಂಗವಿಕಲ ಮಕ್ಕಳಿಗೆ ಮೀಸಲಾದ ಶೇ5ರಷ್ಟು ಅನುದಾನದ ಸಮರ್ಪಕ ಬಳಕೆಯ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ ಅಂದಾಜು 25 ಸಾವಿರ ಅಂಗವಿಕಲರಿದ್ದು, ಮಕ್ಕಳ ಸಂಖ್ಯೆಯನ್ನು ನಿಖರವಾಗಿ ಗುರುತಿಸುವ ಅಗತ್ಯವಿದೆ. ಅಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಹೊಣೆ’ ಎಂದರು.

‘ಅಂಧ ಮಕ್ಕಳಿಗೆ ಬ್ರೈಲ್ ಶಿಕ್ಷಣ ವ್ಯವಸ್ಥೆ, ದೈಹಿಕ ದೋಷವಿರುವ ಮಕ್ಕಳಿಗೆ ಜನನದ 48 ಗಂಟೆಯೊಳಗೆ ಶಸ್ತ್ರಚಿಕಿತ್ಸೆ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ತಲುಪಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿದ್ದಾರ್ಥ್ ಗೋಯಲ್ ಮಾತನಾಡಿ, ‘ಮಕ್ಕಳ ವಿರುದ್ಧದ ಅಪರಾಧಗಳನ್ನು ತಡೆಗಟ್ಟಲು ಕೇವಲ ಶಿಕ್ಷೆಯಷ್ಟೇ ಸಾಕಾಗುವುದಿಲ್ಲ‌. ಅಪರಾಧಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕೆ., ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹನುಮಂತಗೌಡ ಪಾಟೀಲ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಗಿರಿಜಾ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.