ADVERTISEMENT

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿನ ಅತೀ ದೊಡ್ಡ ಮೋಸಗಾರ: ಗೋವಿಂದ ಕಾರಜೋಳ ಆರೋಪ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2023, 15:45 IST
Last Updated 16 ಡಿಸೆಂಬರ್ 2023, 15:45 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿನ ಅತೀ ದೊಡ್ಡ ಮೋಸಗಾರ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಹಿಂದಿನಿಂದಲೂ ಬಡ್ಡಿ ರಹಿತ ಸಾಲವನ್ನೇ ನೀಡಲಾಗುತ್ತಿದ್ದು, ಬಾಗಲಕೋಟೆ ಡಿಸಿಸಿ ಬ್ಯಾಂಕ್‌ನಲ್ಲೇ ₹2.58 ಲಕ್ಷ ರೈತರಿಗೆ ₹೯೫೦ ಕೋಟಿ ಬಡ್ಡಿ ರಹಿತ ಸಾಲ ವಿತರಿಸಲಾಗಿದೆ. ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿರುವುದಾಗಿ ಸುಳ್ಳು ಹೇಳಿರುವ ಮಹಾ ಮೋಸಗಾರ ಎಂದು ಟೀಕಿಸಿದರು.

ರೈತರ ₹2 ಲಕ್ಷ ಸಾಲ ಮನ್ನಾ ಮಾಡಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಆದರೆ, ಇದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಅಧಿವೇಶನದಲ್ಲಿ ಉತ್ತರ ಕರ್ನಾಟಕಕ್ಕೆ ಘೋಷಿಸಿರುವ ಯೋಜನೆಗಳೆಲ್ಲವೂ ಪೊಳ್ಳು ಭರವಸೆಗಳಾಗಿವೆ ಎಂದು ವಾಗ್ದಾಳಿ ನಡೆಸಿದರು.

ADVERTISEMENT

ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಕೈಗಾರಿಕೆ ಕ್ಲಸ್ಟರ್‌ಗಳನ್ನು ಮಾಡುವುದಾಗಿ ಹೇಳಿದ್ದಾರೆ. ಬಜೆಟ್‌ನಲ್ಲಿ ಅನುದಾನ ಮೀಸಲಿಡದೇ ಇದ್ಯಾವುದು ಸಾಧ್ಯವಿಲ್ಲ. ರಾಜ್ಯ ಸರ್ಕಾರದ  ಕೆಟ್ಟ ನೀತಿಯಿಂದಾಗಿ ಇರುವ ಕೈಗಾರಿಕೆಗಳು ಸಹ ಮುಚ್ಚುತ್ತಿವೆ. ಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. 

ಯುಕೆಪಿಗೆ ವಿಚಾರದಲ್ಲೂ ಮೋಸ: ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತರ ಕರ್ನಾಟಕದ ನೀರಾವರಿ, ಮೂಲಸೌಕರ್ಯ, ಶಿಕ್ಷಣ ಸೇರಿದಂತೆ ವಿವಿಧ ಯೋಜನೆಗಳಿಗಾಗಿ ₹22 ಸಾವಿರ ಕೋಟಿ ಅನುದಾನ ಒದಗಿಸಿತ್ತು. ಆದರೆ, ಈ ಸರ್ಕಾರ ಯಾವುದನ್ನೂ ಮಾಡುತ್ತಿಲ್ಲ ಎಂದು ದೂರಿದರು. 

ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ನಿಯೋಗದ ಅಗತ್ಯವಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಅಂತಿಮ ಹಂತದಲ್ಲಿದೆ. ಮುಂದಿನ ಒಂದೆರಡು ತಿಂಗಳಲ್ಲಿ ಇತ್ಯರ್ಥವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಜನರು ರಾಜಕೀಯ ಪುನರ್‌ ಜನ್ಮ ನೀಡಿದೆ. ಜನರ ಋಣ ತೀರಿಸಲು ಜಿಲ್ಲೆಗೆ ₹10 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.

ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ವೀರಣ್ಣ ಚರಂತಿಮಠ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.