
ಬಾಗಲಕೋಟೆ: ಪ್ರಜಾಸತ್ತಾತ್ಮಕ ವ್ಯವಸ್ಥೆ, ಧರ್ಮನಿರಪೇಕ್ಷತೆ, ಸಾಮಾಜಿಕ ನ್ಯಾಯದ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.
ನವನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 140ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1885ರಲ್ಲಿ ಸ್ಥಾಪಿತವಾದ ಕಾಂಗ್ರೆಸ್ ಪಕ್ಷವು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೇತೃತ್ವ ನೀಡಿತ್ತು ಎಂದರು.
ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹಾನ್ ನಾಯಕರ ತ್ಯಾಗ, ಬಲಿದಾನ ಮತ್ತು ಆದರ್ಶಗಳ ಮೇಲೆ ಕಾಂಗ್ರೆಸ್ ಪಕ್ಷ ಕಟ್ಟಲಾಗಿದೆ. ದೇಶದ ಏಕತೆ, ಅಖಂಡತೆ ಹಾಗೂ ಜನಸಾಮಾನ್ಯರ ಹಕ್ಕುಗಳಿಗಾಗಿ ಹೋರಾಟ ಮುಂದುವರೆಸಿಕೊಂಡು ಬಂದಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮಾತನಾಡಿ, 140 ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ಸದಾ ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಪರವಾಗಿ ನಿಂತ ಪಕ್ಷವಾಗಿದೆ ಎಂದರು.
ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಕಾಂಗ್ರೆಸ್‌ನ ತತ್ವ, ಸಿದ್ಧಾಂತಗಳನ್ನು ಮನೆ, ಮನೆಗೆ ತಲುಪಿಸುವ ಮೂಲಕ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದರು.
ಕಾಂಗ್ರೆಸ್ ಪಕ್ಷದ ಸ್ಥಾಪಕರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು.
ಕೆಪಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ, ಪುಟ್ಟಸ್ವಾಮಿಗೌಡ, ಪ್ರಕಾಶ ತಪಶೆಟ್ಟಿ, ಮಲ್ಲಿಕಾರ್ಜುನ ಮೇಟಿ, ರವೀಂದ್ರ ಕಲ್ಬುರ್ಗಿ, ನಾಗರಾಜ ಷ ಹದ್ಲಿ, ಎಸ್.ಎನ್. ರಾಂಪೂರ, ಶ್ರೀನಿವಾಸ ಬಳ್ಳಾರಿ ,ಹನುಮಂತ ರಾಕುಂಪಿ, ಚಂದ್ರಶೇಖರ ರಾಠೋಡ, ಪರಶುರಾಮ, ಬಾಯಕ್ಕ ಮೇಟಿ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.