ADVERTISEMENT

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಬ್ಬರಿಗೆ ಕೋವಿಡ್: ಪರೀಕ್ಷೆ ಮುಂದೂಡಲು ಆಗ್ರಹ

ಗಣಿತ ಪರೀಕ್ಷೆಗೆ ಹೆಚ್ಚಿನ ಸುರಕ್ಷಾ ಕ್ರಮ: ಡಿಡಿಪಿಐ 

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 5:48 IST
Last Updated 27 ಜೂನ್ 2020, 5:48 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಬಾಗಲಕೋಟೆ: ತಾಲ್ಲೂಕಿನ ಕಲಾದಗಿಯಲ್ಲಿ ಇಬ್ಬರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿರುವ ಸುದ್ದಿ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವಂತೆ ಶನಿವಾರ ಮುಂಜಾನೆ ಪೋಷಕರು ಆಗ್ರಹಿಸಿದರು.

ಆದರೆ ಅಗತ್ಯ ಮುಂಜಾಗರೂಕತಾ ಕ್ರಮಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಗಣಿತ ಪರೀಕ್ಷೆಯನ್ನು ಆರಂಭಿಸಿತು.

ಕಲಾದಗಿಯ ಕಂಟೈನ್ ಮೆಂಟ್ ವಲಯದಿಂದ ಬಂದಿದ್ದ ಏಳು ಮಕ್ಕಳು ಗುರುವಾರ ಇಂಗ್ಲಿಷ್ ಪರೀಕ್ಷೆ ಬರೆದಿದ್ದರು. ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ಮುಂಜಾಗರೂಕತಾ ಕ್ರಮವಾಗಿ ಎಲ್ಲಾ ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದೆವು. ಈ ಪೈಕಿ ಇಬ್ಬರಿಗೆ ಸೋಂಕು ಪಾಸಿಟಿವ್ ಇರುವುದು ಗೊತ್ತಾಗಿದೆ. ಉಳಿದ ಐದು ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಡಿಡಿಪಿಐ ಶ್ರೀಶೈಲ ಬಿರಾದಾರ 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ಕೋವಿಡ್-19 ಸೋಂಕಿನ ವರದಿ ನೆಗೆಟಿವ್ ಬಂದಿರುವ ಐದು ವಿದ್ಯಾರ್ಥಿಗಳು ಗಣಿತ ಪರೀಕ್ಷೆಗೆ ಹಾಜರಾಗಿದ್ದಾರೆ. ಸೋಂಕಿತ ಇಬ್ಬರು ವಿದ್ಯಾರ್ಥಿಗಳಿಗೆ ಅವರ ಕುಟುಂಬದ ಸದಸ್ಯರ ಸಂಪರ್ಕದಿಂದ ಸೋಂಕು ತಗುಲಿದೆ ಅವರನ್ನು ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದರು.

ಇಂಗ್ಲಿಷ್ ಪರೀಕ್ಷೆಯ ವೇಳೆ ಇವರ ಕೊಠಡಿಯ ಮೇಲ್ವಿಚಾರಕರಾಗಿದ್ದ ಶಿಕ್ಷಕರನ್ನು 15 ದಿನಗಳ ಹೋಂ ಕ್ವಾರೆಂಟೈನ್ ಗೆ ಒಳಪಡಿಸಲಾಗಿದೆ. ಶೀತ-ಜ್ವರದ ಲಕ್ಷಣಗಳು ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಇನ್ನೂ 9 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ಬಿರಾದಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.