ADVERTISEMENT

ಕೋವಿಡ್ ಚಿಕಿತ್ಸೆ; ಹಾಸಿಗೆ ಸಂಖ್ಯೆ ಹೆಚ್ಚಿಸಿ ಅಧಿಕಾರಿಗಳಿಗೆ ಸೂಚನೆ

ಸೋಂಕಿತರ ಸಂಖ್ಯೆ ಹೆಚ್ಚಳ; ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಳಸದ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 15:46 IST
Last Updated 9 ಜುಲೈ 2020, 15:46 IST
ಬಾಗಲಕೋಟೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಅಧಿಕಾರಿಗಳ ಸಭೆ ನಡೆಸಿದರು
ಬಾಗಲಕೋಟೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಅಧಿಕಾರಿಗಳ ಸಭೆ ನಡೆಸಿದರು   

ಬಾಗಲಕೋಟೆ: ಕೋವಿಡ್ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಚಿಕಿತ್ಸೆಗೆ ತೊಂದರೆಯಾಗದಂತೆ ಹಾಸಿಗೆಗಳ ಸಂಖ್ಯೆ ಹೆಚ್ಚಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಕೋವಿಡ್–19 ನಿಯಂತ್ರಣದ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚುತ್ತಿವೆ. ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಸಿದ್ಧಪಡಿಸಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿ ಆಂಬುಲೆನ್ಸ್‌ಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಚಿಕಿತ್ಸೆಗೆ ಬೇಕಾದ ಔಷಧ, ಪಿಪಿಇ ಕಿಟ್, ತ್ರಿಪಲ್‌ಲೇಯರ್, ಎನ್–95 ಮಾಸ್ಕ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಐಸಿಯುಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಸೋಂಕಿತರನ್ನು ಉಪಚರಿಸುತ್ತಿರುವ ವೈದ್ಯರ ಕಾರ್ಯವನ್ನು ಶ್ಲಾಘಿಸಿದರು.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ, ‘ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆಗಳ ಸಂಖ್ಯೆಯನ್ನು 257ರಿಂದ 300ಕ್ಕೆ ಹೆಚ್ಚಿಸಲಾಗುತ್ತಿದೆ. ಕುಮಾರೇಶ್ವರ ಆಸ್ಪತ್ರೆಯಲ್ಲಿ 200 ಹಾಸಿಗೆಗಳು ಸಿದ್ಧವಾಗಿವೆ’ ಎಂದರು. ‘ರೋಗಿಗಳ ಸಂಖ್ಯೆ ಹೆಚ್ಚಾದಲ್ಲಿ ನವನಗರದ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ 100 ಹಾಸಿಗೆಗಳ ಸಿದ್ಧಪಡಿಕೊಳ್ಳಲಾಗುವುದು. ಜಮಖಂಡಿ ಉಪ ವಿಭಾಗದ ವ್ಯಾಪ್ತಿಯಲ್ಲಿ 300 ಹಾಸಿಗೆ, ಇಳಕಲ್ ತಾಲ್ಲೂಕು ಆಸ್ಪತ್ರೆ, ಬಾದಾಮಿ ಚಿಕ್ಕ ಮುಚ್ಚಳಗುಡ್ಡದಲ್ಲಿ ಹೆಚ್ಚುವರಿ ಹಾಸಿಗೆ ಸಿದ್ಧಪಡಿಸಿಕೊಳ್ಳಲಾಗುವುದು’ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಎ.ಎನ್.ದೇಸಾಯಿ ಮಾತನಾಡಿ, ‘ಚಿಕಿತ್ಸೆಗೆ ಬೇಕಾದ ಔಷಧ ಹಾಗೂ ಎಲ್ಲ ರೀತಿಯ ಸಲಕರಣೆಗಳು ಲಭ್ಯವಿದೆ. ಜಿಲ್ಲೆಯಲ್ಲಿ ಹೆಚ್ಚಾಗಿ 20ರಿಂದ 40 ವಯಸ್ಸಿನವರಲ್ಲಿ ಕೋವಿಡ್ ಪ್ರಕರಣ ಕಂಡುಬಂದಿವೆ. 60 ವರ್ಷದ ಮೇಲ್ಪಟ್ಟ 19 ಮಂದಿಯಲ್ಲಿ ಪ್ರಕರಣ ಕಂಡುಬಂದಿವೆ’ ಎಂದರು.

ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ಪ್ರಕಾಶ ಬಿರಾದಾರ, ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಹಾಗೂ ಅವರಿಗೆ ದಿನನಿತ್ಯ ನೀಡುತ್ತಿರುವ ಆಹಾರದ ಬಗ್ಗೆ ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಯಶವಂತ ಗೋರ
ಕಾರ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಗಳಾದ ಎಂ.ಗಂಗಪ್ಪ, ಸಿದ್ದು ಹುಳ್ಳೊಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.