ADVERTISEMENT

ಜನನ, ಮರಣ ನೋಂದಣಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಾನಕಿ

ಜಿಲ್ಲಾ ಸಮನ್ವಯ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 16 ಮೇ 2025, 14:27 IST
Last Updated 16 ಮೇ 2025, 14:27 IST
ಬಾಗಲಕೋಟೆಯಲ್ಲಿ  ಜಿಲ್ಲಾಧಿಕಾರಿ ಜಾನಕಿ ಕೆ.ಎಂ.ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು
ಬಾಗಲಕೋಟೆಯಲ್ಲಿ  ಜಿಲ್ಲಾಧಿಕಾರಿ ಜಾನಕಿ ಕೆ.ಎಂ.ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು   

ಬಾಗಲಕೋಟೆ: ‘ಆಸ್ಪತ್ರೆಗಳಲ್ಲಿ ಸಂಭವಿಸಿದ ಜನನ, ಮರಣ ಮತ್ತು ಭ್ರೂಣದಲ್ಲೇ ಮೃತಪಟ್ಟ  ಶಿಶುಗಳ ವಿವರವನ್ನು ನಿಗದಿತ ಸಮಯದೊಳಗೆ ನೋಂದಣಿಗೆ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಾನಕಿ ಜೆ.ಎಂ ಅಧಿಕಾರಿಗಳಿಗೆ   ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಗರಿಕ ನೋಂದಣಿ ಪದ್ಧತಿ ಉತ್ತಮ ಪಡಿಸುವ ಸಲುವಾಗಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಇ-ಜನ್ಮ ತಂತ್ರಾಂಶದಲ್ಲಿ ಜನನ ಮತ್ತು ಮರಣ ನೋಂದಣಿಯನ್ನು 21 ದಿನಗಳೊಳಗಾಗಿ ಮಾಡಬೇಕು. ನೋಂದಣಿಯಾಗದೇ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಸಂಬಂಧಿಸಿದ ಉಪ ನೋಂದಣಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಹೇಳಿದರು.

ADVERTISEMENT

ನೋಂದಣಿ ಪ್ರಕ್ರಿಯೆಗೆ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆಗಳ ಸಹಕಾರ ಪಡೆದುಕೊಳ್ಳಬೇಕು. ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಘಟಿಸಿದ ಜನನ, ಮರಣ ಹಾಗೂ ಭ್ರೂಣದಲ್ಲೇ ಮೃತಪಟ್ಟ  ಶಿಶುಗಳ ವಿವರವನ್ನು 21 ದಿನಗಳಲ್ಲಿ ನೋಂದಾಯಿಸಿ ಉಚಿತ ಪ್ರಮಾಣ ಪತ್ರವನ್ನು ಸಂಬಂಧಿಸಿದ ಮಾಹಿತಿದಾರರಿಗೆ ವಿತರಿಸಬೇಕು’ ಎಂದು ತಿಳಿಸಿದರು.

ಜನನ, ಮರಣ ತಿದ್ದುಪಡಿ, ರದ್ದತಿಗೆ ಸಂಬಂಧಿಸಿದಂತೆ ಜನನ, ಮರಣ ನೋಂದಣಾಧಿಕಾರಿಗಳು, ಉಪ ನೋಂದಣಾಧಿಕಾರಿಗಳು ತಾವೇ ಆದೇಶವನ್ನು ಮಾಡಿ ಮೂಲ ದಾಖಲೆಯಲ್ಲಿ ತಿದ್ದುಪಡಿ ಮಾಡಬಹುದು. ಜನನ, ಮರಣಗಳ ದಾಖಲೆಗಳಲ್ಲಿ ತಿದ್ದುಪಡಿ ಮಾಡಲು ಸತ್ಯಾಸತ್ಯತೆ ಪರಿಶೀಲಿಸಿ ಕ್ರಮವಹಿಸಬೇಕು. ನೋಂದಣಿ ಘಟಕಗಳ ಪರಿಶೀಲನಾ ಸಮಯದಲ್ಲಿ ಕೆಲವು ನೂನ್ಯತೆಗಳು ಕಂಡುಬಂದಿವೆ. ಅವುಗಳನ್ನು ಗಣನೆಗೆ ತೆಗೆದುಕೊಂಡು ನೋಂದಣಿ ಪ್ರಕ್ರಿಯೆ ನಡೆಸುವಂತೆ ಸೂಚನೆ ನೀಡಿದರು.

ಇ-ಜನ್ಮ ತಂತ್ರಾಂಶ ಜಾರಿಗೊಳ್ಳುವ ಪೂರ್ವದಲ್ಲಿ ದಾಖಲಾತಿಗಳ ಸ್ಕ್ಯಾನಿಂಗ್ ಮತ್ತು ಡಿಜಿಟೈಜೇಷನ್ ಪ್ರಕ್ರಿಯೆ ಮೊದಲ ಹಂತದಲ್ಲಿ ಆಗಿದ್ದು, ಎರಡನೇ ಹಂತದಲ್ಲಿ ಈ ಕಾರ್ಯ ಆಗಿಲ್ಲ. ಜಿಲ್ಲೆಯಲ್ಲಿ ಒಟ್ಟು ಜನನಕ್ಕೆ ಸಂಬಂಧಿಸಿದ 26,100 ಮತ್ತು ಮರಣಕ್ಕೆ ಸಂಬಂಧಿಸಿದ 13,600 ಸೇರಿ ಒಟ್ಟು 39,700 ದಾಖಲಾತಿಗಳ ಸ್ಕ್ಯಾನಿಂಗ್ ಮತ್ತು ಡಿಜಿಟೈಜೇಷನ್‌ಗೆ ಬಾಕಿ ಉಳಿದಿವೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳಬೇಕು. ಸಭೆಗೆ ಗೈರು ಹಾಜರಾದ ಮೂರು ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸೂಚಿಸಿದರು.

2024-25ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆ ಕಟಾವು ಪ್ರಯೋಗಗಳನ್ನು ನಿಯಮಾನುಸಾರ ಕೈಗೊಳ್ಳಲು ಮತ್ತು ಯಾವುದೇ ಪ್ರಯೋಗಗಳು ನಷ್ಟಗೊಳ್ಳದಂತೆ ನೋಡಿಕೊಳ್ಳಬೇಕು ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕಿನ ಅನುಷ್ಠನಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಅಂಕಿ ಸಂಖ್ಯೆ ಅಧಿಕಾರಿ ಗೌರಮ್ಮ ಸುಂಕದ, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೆನ್ನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರವೀಂದ್ರ ಹಕಾಟಿ, ಆಯಾ ತಾಲ್ಲೂಕಿನ ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.