ಬಾಗಲಕೋಟೆ: ‘ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ವಿವಿಧ ಇಲಾಖೆಗಳ ಸಮನ್ವಯ ಅಗತ್ಯವಾಗಿದೆ’ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಮಾದಕ ದ್ರವ್ಯಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ‘ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕಿದೆ. ಮಾದಕ ವಸ್ತುಗಳಿಂದ ದೂರ ಉಳಿಯುವಂತೆ ಮಾಡಲು ಕಾರ್ಯಕ್ರಮ ಹಮ್ಮಿಕೊಳ್ಳಬೇಕು’ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ‘ಶಾಲಾ–ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ನಂತರ ಎಷ್ಟು ಪ್ರಮಾಣದಲ್ಲಿ ಉಪಯುಕ್ತವಾಗುತ್ತಿದೆ ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕುವ ಕೆಲಸ ಆಗಬೇಕು’ ಎಂದು ಹೇಳಿದರು.
ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆ ಸಿಬ್ಬಂದಿ ಆಗಾಗ್ಗೆ ಕೃಷಿ ಜಮೀನು, ತೋಟಗಳಿಗೆ ಭೇಟಿ ನೀಡಿ ಗಾಂಜಾ ಬೆಳೆ ಬೆಳೆಯುತ್ತಿರುವ ಬಗ್ಗೆ ಪರಿಶೀಲಿಸಬೇಕು. ಖಾಸಗಿ ಪಾರ್ಸಲ್ ಸರ್ವಿಸ್‍ಗಳ ಕಚೇರಿ ಹಾಗೂ ಆನ್‍ಲೈನ್ ಮಾರುಕಟ್ಟೆ ಗೋದಾಮುಗಳನ್ನು ಪರಿಶೀಲನೆ ಮಾಡಬೇಕು. ನಿರ್ಬಂಧಿತ ಔಷಧಿಗಳು ಜನ ಸಾಮಾನ್ಯರಿಗೆಲ್ಲರೂ ಮಾರಾಟ ಮಾಡುವಂತಿಲ್ಲ ಎಂದು ಎಚ್ಚರಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಶಾಲಾ–ಕಾಲೇಜುಗಳಲ್ಲಿ ಮಾದಕ ದ್ರವ್ಯ ನಿಯಂತ್ರಣ ತಂಡ ರಚಿಸಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ವಸತಿ ನಿಲಯಕ್ಕೆ ಸೇರಿಸಿಕೊಳ್ಳುವ ಮುನ್ನ ಪರಿಶೀಲನೆ ಮಾಡಬೇಕು ಎಂದರು.
ಉಪಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಮಹಾಂತೇಶ್ವರ ಜಿದ್ದಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಸಿ.ಮನ್ನಿಕೇರಿ ಇದ್ದರು.
ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ. ಅವರಲ್ಲಿ ಅರಿವು ಮೂಡಿಸಬೇಕು. ಮಾದಕ ವಸ್ತು ಕಳ್ಳಸಾಗಣೆ ಉದ್ದೇಶಗಳಿಗಾಗಿ ಕೋರಿಯರ್ ಸೇವೆಗಳ ಸರಿಯಾದ ಮೇಲ್ವಿಚಾರಣೆ ಸಹ ಅಗತ್ಯ–ಸಿದ್ದಾರ್ಥ, ಗೋಯಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.