ಕೂಡಲಸಂಗಮ (ಬಾಗಲಕೋಟೆ ಜಿಲ್ಲೆ): ‘ಕೆಲವರ ಓಲೈಕೆಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಅವರು ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಜೊತೆಗೆ ಕಾಲ್ಪನಿಕ ರೇಣುಕಾಚಾರ್ಯರ ಜಯಂತಿ ಆಚರಿಸುವಂತೆ ಸುತ್ತೋಲೆ ಹೊರಡಿಸಿರುವುದು ಹಾಸ್ಯಾಸ್ಪದ’ ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.
‘ಸತ್ಯದ ಅರಿವಿದ್ದರೂ ಕೆಲವರನ್ನು ಓಲೈಸಲು ಅಸತ್ಯವನ್ನು ಹೇಳುವುದು ಅಪರಾಧ. ಸಾಮಾಜಿಕ ಬದಲಾವಣೆ ಮಾಡಿ ಜನರಿಗೆ ವೈಚಾರಿಕ ಪ್ರಜ್ಞೆ ಮೂಡಿಸಿದ ಬಸವಣ್ಣನ ಜಯಂತಿಯೊಂದಿಗೆ ಕಾಲ್ಪನಿಕ ರೇಣುಕಾಚಾರ್ಯರನ್ನು ತಗಲು ಹಾಕುವ ಹುನ್ನಾರ ಮಾಡಿರುವುದು ದುರಂತ’ ಎಂದು ಅವರು ಟೀಕಿಸಿದ್ದಾರೆ.
‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಲಿಂಗಾಯತರ ಪ್ರಾತಿನಿಧಿಕ ಸಂಸ್ಥೆ ಅಲ್ಲ. ಅವರು ಹೊರಡಿಸುವ ಆದೇಶಕ್ಕೆ ಲಿಂಗಾಯತರು ಗಮನ ಹರಿಸುವ ಅಗತ್ಯ ಇಲ್ಲ. ಬಸವಣ್ಣನವರಿಗೆ ಅಗೌರವ ತೋರಿಸುವ ಉದ್ದೇಶದಿಂದಲೇ ಇಂತಹ ಕೃತ್ಯ ಮಾಡುತ್ತಿದ್ದಾರೆ. ಎಲ್ಲ ಲಿಂಗಾಯತರು ಅರ್ಥ ಮಾಡಿಕೊಳ್ಳಬೇಕು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.