
ಬಾಗಲಕೋಟೆ: ಹುಬ್ಬಳ್ಳಿ ಸಮೀಪದ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಚಂದ್ರಕಾಂತ ಕಾದ್ರೋಳ್ಳಿ ಬಣದ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕವು ಜಿಲ್ಲಾಡಳಿತ ಭವನದ ಎದುರು ಗುರುವಾರ ಪ್ರತಿಭಟನೆ ನಡೆಸಿತು.
ರಾಜ್ಯ ಉಪಾಧ್ಯಕ್ಷ ಸತೀಶ ಎಚ್., ಯುವತಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದಳು ಎಂಬ ಕಾರಣಕ್ಕೆ ಏಳು ತಿಂಗಳ ಗರ್ಭಿಣಿಯನ್ನು ಹತ್ಯೆ ಮಾಡಿರುವುದು ಅತ್ಯಂತ ನೋವಿನ ಘಟನೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ ಮೂಗನೂರ ಮಾತನಾಡಿ, ಪ್ರೀತಿಸಿ ಮದುವೆಯಾಗಿರುವುದಕ್ಕಾಗಿ ಯುವತಿಯನ್ನು ಹತ್ಯೆ ಮಾಡಿರುವುದು ತಪ್ಪು. ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಜೊತೆಗೆ ಪೀಡಿತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಸಚಿನ ಗುಡಿಮನಿ, ಶಿವರಂಜ ಪೂಜಾರಿ, ಶಾಂತಾ ಮಾದರ, ರಾಘು ಮಾದರ, ದರ್ಶನ ಮಾದರ, ಬಸವರಾಜ ಮಾದರ, ರಮೇಶ ಹಲಗಿ, ಯಮನಪ್ಪ ಪೂಜಾರಿ, ಸುನೀಲ ಮಾದರ, ಸಂತೋಷ ಮಾದರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.