
ಹುನಗುಂದ: ‘ಕುಟುಂಬ ನಿರ್ವಹಣೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ’ ಎಂದು ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ನೂರಂದಗೌಡ (ಮುತ್ತಣ್ಣ) ಕಲಗೋಡಿ ಹೇಳಿದರು.
ತಾಲ್ಲೂಕು ಪಂಚಾಯಿತಿ ಮತ್ತು ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಬೆಳಗಲ್ಲ ಗ್ರಾಮದಲ್ಲಿ ಸೋಮವಾರ ನಡೆದ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ತಾಂತ್ರಿಕ ಸಮಸ್ಯೆ ಹಾಗೂ ಇನ್ನಿತರ ಕಾರಣಗಳಿಂದ ಕೆಲವರು ಗ್ಯಾರಂಟಿ ಯೋಜನೆಗಳಿಂದ ವಂಚಿತರಾದವರ ಅನುಕೂಲಕ್ಕಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಗಳಲ್ಲಿ ಕುಂದುಕೊರತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.
ಸಿಡಿಪಿಒ ಮುತ್ತಣ್ಣ ಮಾತನಾಡಿ, ‘ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಹುನಗುಂದ ಮತ್ತು ಇಳಕಲ್ ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆ ಶೇ98.5 ರಷ್ಟು ಸಾಧನೆ ಮಾಡಿದೆ’ ಎಂದರು.
ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸದಸ್ಯರಾದ ಸುರೇಶ ಹಳಪೇಟಿ, ಶಿವಕುಮಾರ ಹುನ್ನಹಳ್ಳಿ, ನರೇಗಾ ಸಹಾಯಕ ನಿರ್ದೇಶಕ ಮಹಾಂತೇಶ ಚಲವಾದಿ, ಮುಖಂಡರಾದ ಕರಬಸಪ್ಪ ಹಕಾರಿ,ಮಹಾಂತೇಶ ಹಳಬರ,ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರು ಇದ್ದರು.
‘ಎರಡು ಕೆ.ಜಿ ಪಡಿತರ ಕಡಿತ’
‘ಗ್ರಾಮದ ನ್ಯಾಯ ಬೆಲೆ ಅಂಗಡಿಯವರು ಪಡಿತರ ವಿತರಣೆ ಸಂದರ್ಭದಲ್ಲಿ ಎರಡು ಕೆ.ಜಿ ಕಡಿತವಾಗುತ್ತಿದೆ’ ಎಂದು ಮಹಿಳೆಯರು ಆರೋಪಿಸಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ನೂರಂದಗೌಡ ಕಲಗೋಡಿ ಅವರು ‘ಸರ್ಕಾರ ನಿಗದಿತ ಪ್ರಮಾಣದಲ್ಲಿ ಪಡಿತರ ಕೊಟ್ಟರು ಗ್ರಾಹಕರಿಗೆ ಕಡಿಮೆ ಕೊಡುತ್ತಿರುವುದು ಏಕೆ?’ ಎಂದು ಆಹಾರ ನಿರೀಕ್ಷಕ ರಾಜಶೇಖರ ತುಂಬದ ಅವರನ್ನು ತರಾಟೆ ತಗೆದುಕೊಂಡರು. ಮುಂಬರುವ ದಿನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳಲು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.