ADVERTISEMENT

ಅನುದಾನ ನೀಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಕಲ್ಲಿನಾಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2024, 15:26 IST
Last Updated 23 ಫೆಬ್ರುವರಿ 2024, 15:26 IST

ಬಾಗಲಕೋಟೆ: ಗಾಣಿಗ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ₹500 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ, ಮುಂಬರುವ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ಕಲ್ಲಿನಾಥ ಸ್ವಾಮೀಜಿ ಆಗ್ರಹಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬಿಜೆಪಿ ಸರ್ಕಾರ ಸ್ಥಾಪನೆ ಮಾಡಲಾಗಿತ್ತು. ಆದರೆ, ಅನುದಾನ ಬಿಡುಗಡೆ ಮಾಡಿರಲಿಲ್ಲ. ಕಾಂಗ್ರೆಸ್‌ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಇಲ್ಲಿಯವರೆಗೆ ಅನುದಾನ ಬಿಡುಗಡೆಯಾಗಿಲ್ಲ ಎಂದರು.

ಫೆ.5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಮಾಡಲಾಗಿತ್ತು. ಸಚಿವ ಶಿವರಾಜ ತಂಗಡಗಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿತ್ತು. ಬಜೆಟ್‌ನಲ್ಲಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ದೂರಿದರು.

ADVERTISEMENT

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸ್ ಅಧಿಕಾರಕ್ಕೆ ಬರಬೇಕಾದರೆ ನಮ್ಮ ಸಮುದಾಯ ಬೆಂಬಲಿಸಿದೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ, ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.

ಲೋಕಸಭಾ ಚುನಾವಣೆಯಲ್ಲಿ ಪಕ್ಷಗಳು ಯಾರಿಗೆ ಟಿಕೆಟ್ ಹಂಚಿಕೆ ಮಾಡುತ್ತಾರೆ ಎಂಬುದನ್ನು ನೋಡಿಕೊಂಡು ಯಾರನ್ನು ಬೆಂಬಲಿಸಬೇಕು ಎಂಬ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದರು. 

ಸಂಸದ ಪಿ.ಸಿ. ಗದ್ದಿಗೌಡರ ಅವರಿಗೆ ಟಿಕೆಟ್‌ ಕೊಟ್ಟರೆ ಮತ್ತೆ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಜಾತ್ಯತೀತರಾಗಿದ್ದು, ಎಲ್ಲರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಯಾವುದೇ ಪಕ್ಷ ಗಾಣಿಗ ಸಮುದಾಯಕ್ಕೆ ಟಿಕೆಟ್ ನೀಡಿದರೆ, ಅವರ ಗೆಲುವು ನಿಶ್ಚಿತ ಎಂದು ಹೇಳಿದರು.

ಶ್ರೀಶೈಲ ದೊಡ್ಡಮನಿ, ಈರಣ್ಣ, ಮುದುಕಪ್ಪ ತುಂಬರಮಟ್ಟಿ ಬಸವರಾಜ ಮಡ್ಡಿ, ಮಹಾದೇವ ಗಡದಿನ್ನಿ, ಶಂಕರಗೌಡ ಶೇಖನ್ನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.