ADVERTISEMENT

ದೇಸಿ ತಳಿ ಉಳಿಸಿ, ಬೆಳೆಸುವ ಕೆಲಸವಾಗಲಿ: ಸಚಿವ ತಿಮ್ಮಾಪುರ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 6:59 IST
Last Updated 2 ಮಾರ್ಚ್ 2026, 6:59 IST
ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ನಿರ್ಮಿಸಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು
ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ನಿರ್ಮಿಸಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು   

ಬಾಗಲಕೋಟೆ: ರೈತರು ತಲೆತಲಾಂತರಗಳಿಂದ ಬೆಳೆಯುತ್ತಿರುವ ದೇಸಿ ತಳಿಗಳನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ನವನಗರದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಶನಿವಾರ ಜಿಲ್ಲಾಡಳಿತ, ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

‘ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಗಳಿಸಿದೆ. ಹೆಚ್ಚಿನ ಉತ್ಪಾದನೆ ಮಾಡುವ ಉದ್ದೇಶದಿಂದ ಅನೇಕ ರಾಸಾಯನಿಕ ಔಷಧಗಳನ್ನು ಸಿಂಪರಣೆ ಮಾಡಲಾಗುತ್ತಿದೆ. ಇದರಿಂದ ಮಣ್ಣಿನ ಫಲವತ್ತತೆ ಕಳೆದುಕೊಳ್ಳುವುದರ ಜೊತೆಗೆ ರುಚಿ ಕೂಡ ಹಾಳಾಗುತ್ತಿದೆ. ಆರೋಗ್ಯವಂತ ಜೀವನಕ್ಕೆ ಬೇಕಾಗುವ ಆಹಾರ ಉತ್ಪಾದನೆ ಆಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ದೇಸಿ ತಳಿಗಳನ್ನು ಉಳಿಸಿ ಸಂರಕ್ಷಿಸುವ ಕೆಲಸ ಮಾಡುತ್ತಿದೆ’ ಎಂದು ಹೇಳಿದರು.

ADVERTISEMENT

‘ಅಂದಾಜು ₹99.74 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾಗಿ ಕೃಷಿ ತರಬೇತಿ ಕಟ್ಟಡ ನಿರ್ಮಿಸಲಾಗಿದೆ. ಈ ಕೇಂದ್ರದಲ್ಲಿ ಊಟ, ವಸತಿಯೊಂದಿಗೆ ತರಬೇತಿ ನೀಡಲಾಗುತ್ತದೆ. ಅಲ್ಲದೇ ಜಿಲ್ಲೆಯಲ್ಲಿ ರೈತರು ಬೆಳೆಯುವ ತರಕಾರಿ, ಹಣ್ಣು ಸೇರಿದಂತೆ ಇತರ ಬೆಳೆಗಳು ಹಾಳಾಗದಂತೆ ಶೇಖರಿಸಲು ನಬಾರ್ಡ್ ಯೋಜನೆಯಡಿ ₹9.51 ಕೋಟಿ ವೆಚ್ಚದಲ್ಲಿ 2,500 ಮೆಟ್ರಿಕ್ ಟನ್ ಸಾಮರ್ಥ್ಯವುಳ್ಳ ಶೀತಲ ಘಟಕ ನಿರ್ಮಿಸಲಾಗುತ್ತಿದೆ’ ಎಂದರು.

‘ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಒಂದಾದ ಕಬ್ಬು ಬೆಳೆಯಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗಾಗಿ ಜಿಲ್ಲೆಯ 14 ಸಕ್ಕರೆ ಕಾರ್ಖಾನೆ ವ್ಯಾಪ್ತಿಯಡಿ ಒಂದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರನ್ನು ಆಯ್ಕೆ ಮಾಡಿಕೊಂಡು ಹನಿ ನೀರಾವರಿ ಘಟಕ ಅನುಷ್ಠಾನ, ಕಬ್ಬಿನ ಬೆಳೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಮೂಲಕ ಕಬ್ಬು ಬೆಳೆ ಪ್ರಾತ್ಯಕ್ಷಿಕೆ ಮಾಡಲಾಗುತ್ತಿದೆ. ಇದರಿಂದ ನೀರಿನ ಮಿತವ್ಯಯ ಬಳಕೆ, ರಸಗೊಬ್ಬರ ಉಳಿತಾಯ, ಕೀಟನಾಶಕದ ಅವಲಂಬನೆ ಕಡಿಮೆ ಮಾಡಬಹುದಾಗಿದೆ’ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಬಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮಾತನಾಡಿ, ‘ಬೆಳೆಯುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಉತ್ಪಾದನೆ ಪ್ರಮಾಣ ಹೆಚ್ಚಿಸುವ ಅಗತ್ಯವಿದೆ. ಜನಸಂಖ್ಯೆ ಹೆಚ್ಚುತ್ತಿದೆ. ಆದರೆ, ಭೂಮಿ ಹೆಚ್ಚಳವಾಗುವುದಿಲ್ಲ. ಇದನ್ನು ಅರಿಯಬೇಕಿದೆ. ಹೊಸ, ಹೊಸ ತಳಿಗಳ ಸಂಶೋಧನೆಯಿಂದ ಉತ್ಪಾದನೆ ಪ್ರಮಾಣ ಹೆಚ್ಚಿಸಿ ಈಗ ಬೇರೆ ದೇಶಕ್ಕೆ ರಪ್ತು ಮಾಡಲಾಗುತ್ತಿದೆ. ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡಬೇಕು’ ಎಂದರು.

ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ಪಡೆದ ಸುನೀತಾ ಮನೋಹರ ಮೇಟಿ, ರಾಮನಗೌಡ ಪಾಟೀಲ, ಸಿದ್ದುಬಾ ಪಾಂಡು ಮಾಡಿಕ ಅವರನ್ನು ಸನ್ಮಾನಿಸಲಾಯಿತು. ಸಾಲ ಮಂಜೂರಾತಿ ಪ್ರಮಾಣ ಪತ್ರ, ಮಣ್ಣು ಆರೋಗ್ಯ ಚೀಟಿ ವಿತರಣೆ ಹಾಗೂ ಕಬ್ಬಿನಲ್ಲಿ ರವದಿಯ ನಿರ್ವಹಣೆ, ನೈಸರ್ಗಿಕ ಕೃಷಿಯ ಮಾಹಿತಿಯುಳ್ಳ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅನಿಲಕುಮಾರ ದಡ್ಡಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಹಾಂತೇಶ ಹಟ್ಟಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ತೋವಿವಿಯ ಡೀನ್ ತಮ್ಮಯ್ಯ, ಕೃಷಿ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.