ರಾಂಪುರ: ಇಂದಿರಾ ಕ್ಯಾಂಟೀನ್ ತೆರೆಯುವ ಮೂಲಕ ರಾಜ್ಯ ಸರ್ಕಾರವು ಬಡವರು ಮತ್ತು ಮಧ್ಯಮ ವರ್ಗದವರ ಹಸಿವು ನೀಗಿಸಲು ಮಹತ್ವದ ಹೆಜ್ಜೆ ಇರಿಸಿದೆ ಎಂದು ಶಾಸಕ ಎಚ್.ವೈ.ಮೇಟಿ ಹೇಳಿದರು.
ಸಮೀಪದ ಶಿರೂರ ಪಟ್ಟಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಬಡವರು, ಮಧ್ಯಮ ವರ್ಗದವರು, ಕಾರ್ಮಿಕರು, ಬಡ ಶಾಲಾ ಮಕ್ಕಳಿಗೆ ಕೈಗೆಟುಕುವ ದರದಲ್ಲಿ ಉಪಹಾರ ಹಾಗೂ ಊಟ ನೀಡಲಾಗುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಹಸಿವು ಮುಕ್ತ ಕರ್ನಾಟಕ ಮಾಡಬೇಕೆಂಬುದು ಸಿಎಂ ಸಿದ್ದರಾಮಯ್ಯ ಕನಸಾಗಿದ್ದು, ಈ ಮೂಲಕ ಅದನ್ನು ಸಾಕಾರಗೊಳಿಸಲಾಗುತ್ತಿದೆ. ಇಂದಿರಾ ಕ್ಯಾಂಟೀನ್ ಯೋಜನೆ ಬಡವರ ಪಾಲಿಗೆ ವರದಾನವಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ರೇಣುಕಾ ಮಾತನಾಡಿ, ಜಿಲ್ಲೆಯಲ್ಲಿ ಇನ್ನೂ ಅನೇಕ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು ಎಂದರು.
ಸಾನ್ನಿಧ್ಯ ವಹಿಸಿದ್ದ ಶಿವಯೋಗಾಶ್ರಮದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಅನ್ನದಾನ ಶ್ರೇಷ್ಠವಾಗಿದೆ. ಬಡವರು, ಕೂಲಿ ಕಾರ್ಮಿಕರು, ಬಡ ವಿದ್ಯಾರ್ಥಿಗಳಿಗೆ ಕಡಿಮೆ ಬೆಲೆಯಲ್ಲಿ ಉಪಹಾರ, ಊಟ ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರ ಇಂದಿರಾ ಕ್ಯಾಂಟೀನ್ ತೆರೆದಿರುವುದು ಶ್ಲಾಘನೀಯ ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಿವಾನಂದ ಆಲೂರ ಪ್ರಾಸ್ತಾವಿಕವಾಗಿ ಮಾತನಾಡಿ, ₹1.50 ಕೋಟಿ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ. ಗುಣಮಟ್ಟದ ಉಪಹಾರ, ಊಟ ನೀಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಗ್ರಾಮ ಪಮಚಾಯಿತಿ ಮಾಜಿ ಅಧ್ಯಕ್ಷ ರಂಗಪ್ಪ ಮಳ್ಳಿ, ಎಸ್.ಬಿ.ಮಾಚಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಎಸ್.ಎನ್.ರಾಂಪುರ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯರಾದ ಹನಮಂತ ಆಡಿನ, ಸಿದ್ದಪ್ಪ ಗಾಳಿ, ಜಗದೀಶ ದೇಸಾನಿ, ತಹಶೀಲ್ದಾರ್ ವಾಸುದೇವ ಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ವೆಂಕಟೇಶ ಹುಣಸಿಗಿಡದ, ಸಹಾಯಕ ಕಾರ್ಯಪಾಲಕ ಅಭಿಯಂತರ ವಿಠ್ಠಲ ಮಾಶ್ಯಾಳ, ಪಟ್ಟಣ ಪಂಚಾಯಿತಿ ಕಿರಿಯ ಅಭಿಯಂತರ ವಿರುಪಾಕ್ಷ ಚವಡಿ, ವ್ಯವಸ್ಥಾಪಕ ಪಿ.ಪಿ.ವರದಪ್ಪನವರ, ಸಂಜಯ ನಡುವಿನಮನಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.