
ಕೆರೂರ ಪಟ್ಟಣದ ಮುಖ್ಯ ರಸ್ತೆ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಕಟ್ಟಡಗಳನ್ನು ಶನಿವಾರ ಪಟ್ಟಣ ಪಂಚಾಯಿತಿ ಸಿಬ್ಬಂದಿ ತೆರವುಗೊಳಿಸಿದರು
ಕೆರೂರ: ಪಟ್ಟಣದಲ್ಲಿ ರಸ್ತೆ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಮನೆ, ಗೂಡಂಗಡಿಗಳನ್ನು ಶನಿವಾರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಜೆಸಿಬಿ ಯಂತ್ರದಿಂದ ತೆರವುಗೊಳಿಸಿದರು. ಈ ಮೂಲಕ ಬಹುದಿನಗಳಿಂದ ನನೆಗುದಿಗೆ ಬಿದಿದ್ದ ರಸ್ತೆ ವಿಸ್ತರಣೆ ಕಾರ್ಯಕ್ಕೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಚಾಲನೆ ನೀಡಿದರು.
ಅಂಬೇಡ್ಕರ್ ವೃತ್ತದಿಂದ ಕೆರೆಗೆ, ಬಸ್ ನಿಲ್ದಾಣದಿಂದ ರಾಚೋಟೇಶ್ವರ ದೇವಸ್ಥಾನಕ್ಕೆ ಹೋಗುವ ಮುಖ್ಯ ರಸ್ತೆ ವಿಸ್ತರಣೆ ಕಾಮಗಾರಿಯನ್ನು ಕೈಗೊಂಡ ಹಿನ್ನೆಲೆಯಲ್ಲಿ ರಸ್ತೆಯ ಎರಡೂ ಬದಿ ಒತ್ತುವರಿ ಮಾಡಿಕೊಂಡ ಕಟ್ಟಡಗಳನ್ನು ತೆರವುಗೊಳಿಸಲಾಯಿತು.
ದಿನೇದಿನೇ ಬೆಳೆಯುತ್ತಿರುವ ಪಟ್ಟಣದಲ್ಲಿ ಸಮರ್ಪಕ ರಸ್ತೆಗಳಿಲ್ಲದ ಕಾರಣ ಜನರು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಅದಕ್ಕಾಗಿ ರಸ್ತೆ ವಿಸ್ತರಿಸಲು ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿತು. ಈ ಹಿನ್ನೆಲೆಯಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲಾಯಿತು. ತೆರವು ಕಾರ್ಯಾಚರಣೆ ವೇಳೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ಉಂಟಾಯಿತು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ ಮಾಡಬಾಳ ಮಾತನಾಡಿ, ಸಾರ್ವಜನಿಕ ಸಂಚಾರಕ್ಕೆ ಸುಸಜ್ಜಿತ ರಸ್ತೆ ನಿರ್ಮಿಸುವ ಸಲುವಾಗಿ ಎರಡು ಮುಖ್ಯ ರಸ್ತೆಗಳ ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗಿದೆ. ಪಟ್ಟಣದ ಅಭಿವೃದ್ಧಿಗೆ ಜನರ ಸಹಕಾರ ಬಹಳ ಮುಖ್ಯವಾಗಿದೆ ಎಂದರು.
ಮುಂಜಾಗ್ರತಾ ಕ್ರಮವಾಗಿ ಪಿಎಸ್ಐ ಭೀಮಪ್ಪ ರಭಕವಿ ನೇತೃತ್ವದಲ್ಲಿ ಡಿಎಆರ್ ತುಕಡಿಯೊಂದಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು. ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಎಂ.ಐ ಹೊಸಮನಿ, ರಮೇಶ ಕಡ್ಲಿಮಟ್ಟಿ, ಮಾಂತೇಶ ಅಣ್ಣೆನ್ನವರ, ಸಂಗಮೇಶ ಮಾದರ, ಅಶ್ವಥ ರಂಗನಗೌಡ್ರ ಹಾಗೂ ಪೌರಕಾರ್ಮಿಕ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.