ಬಾಗಲಕೋಟೆ: ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಸಕ್ಕರೆ ಕಾರ್ಖಾನೆಗಳಿಂದ ತಲಾ 10 ಸಾವಿರ ಸಸಿಗಳನ್ನು ನೆಡುವ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಕೆರೆ ಅಭಿವೃದ್ಧಿ ಶುಲ್ಕ ₹5.80 ಕೋಟಿ ವೆಚ್ಚದಲ್ಲಿ ಮುಚಖಂಡಿ ಕೆರೆ ಮುಂಭಾಗದಲ್ಲಿ ನಿರ್ಮಿಸಿರುವ ಉದ್ಯಾನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ಕಾಣುತ್ತಿದ್ದೇವೆ. ಮುಂದಿನ ಪೀಳಿಗೆಗೆ ಫಲವತ್ತಾದ ಭೂಮಿ, ನೀರು ಒದಗಿಸುವ ಕಾರ್ಯ ಆಗಬೇಕು ಎಂದರು.
ಅಭಿವೃದ್ಧಿ ಕೆಲಸಗಳನ್ನು ಪಕ್ಷಭೇದ ಮರೆತು ಜನರ ಪರ ಕೆಲಸ ಮಾಡಲಾಗುವುದು. ಉದ್ಯಾನ ಇನ್ನಷ್ಟು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ವೈ. ಮೇಟಿ ಮಾತನಾಡಿ, ಆಲಮಟ್ಟಿಯಲ್ಲಿ ನಿರ್ಮಿಸಲಾದ ಸಂಗೀತ ಕಾರಂಜಿ ಮಾದರಿಯಲ್ಲಿ ಮುಖಚಂಡಿ ಉದ್ಯಾನದಲ್ಲಿ ವ್ಯವಸ್ಥೆ ಮಾಡಬೇಕು. ಈ ಕ್ಷೇತ್ರ ಪ್ರವಾಸಿ ತಾಣವಾಗಿ ಬೆಳೆಯಲು ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು ಎಂದರು.
ನಗರಸಭೆ ಪೌರಾಯುಕ್ತ ವಾಸಣ್ಣ ಮಾತನಾಡಿ ಉದ್ಯಾನದಲ್ಲಿ ಕುಡಿಯುವ ನೀರು, ಶೌಚಾಲಯ ಇತರೆ ಸೌಲಭ್ಯ ಒದಗಿಸಲಾಗಿದೆ. ನೀರಿನ ಕಾರಂಜಿ, ವಿಶ್ರಾಂತಿ ತಂಗುದಾಣ, ಬಯಲುರಂಗ ಮಂದಿರ, ಮಕ್ಕಳ ಆಟಿಕೆಗಳು ಹಾಗೂ ಪ್ರೇಕ್ಷಕರ ಗ್ಯಾಲರಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಮುಚಖಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಪ್ಪ ಪೂಜಾರಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.