ADVERTISEMENT

ಬಾಗಲಕೋಟೆ | ಕಾಂಗ್ರೆಸ್‌ ನಾಯಕರಿಂದ ಚೊಂಬು ಹಿಡಿದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 13:38 IST
Last Updated 28 ಜುಲೈ 2024, 13:38 IST
ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ಮಾಡಿದರು
ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ಮಾಡಿದರು   

ಬಾಗಲಕೋಟೆ: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯವಾಗಿರುವುದನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶನಿವಾರ ಪ್ರತಿಭಟನೆ ಮಾಡಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಬಂದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಖಾಲಿ ಚೊಂಬು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಎಚ್.ವೈ.ಮೇಟಿ ಮಾತನಾಡಿ, ‘ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಬಜೆಟ್‌ನಲ್ಲಿ ರಾಜ್ಯದ ಯೋಜನೆಗಳಿಗೆ ಪ್ರಾತಿನಿಧ್ಯ ನೀಡಿಲ್ಲ. ಜನ ವಿರೋಧಿ ಕಾನೂನು ರೂಪಿಸುತ್ತಿದೆ’ ಎಂದು ಟೀಕಿಸಿದರು.

ADVERTISEMENT

‘ಒಕ್ಕೂಟ ವ್ಯವಸ್ಥೆಯಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ. ಆಂಧ್ರಪ್ರದೇಶ, ಬಿಹಾರ ಅನುದಾನ ನೀಡುವ ಬಿಜೆಪಿ ಸರ್ಕಾರ, ಕರ್ನಾಟಕವನ್ನು ಕಡೆಗಣಿಸಲಾಗಿದೆ’ ಎಂದು ದೂರಿದರು.

ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಮಾತನಾಡಿ, ‘ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡಿ ಇತರ ರಾಜ್ಯಗಳಿಗೆ ಏನು ನೀಡದೆ ಅನ್ಯಾಯ ಮಾಡಿದೆ. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿಯ 17 ಸಂಸದರು, ಸಚಿವರು ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ. ರಾಜಕಾರಣ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕನ್ನಡಿಗರ ಋಣ ತೀರಿಸುವ ಕೆಲಸ ಮಾಡುತ್ತಿಲ್ಲ’ ಎಂದು ಟೀಕಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮಾತನಾಡಿ, ‘ಬಿಜೆಪಿಯು ಒಡೆದಾಳುವ ನೀತಿ ರೂಢಿಸಿಕೊಂಡಿದೆ. ಈ ಹಿಂದೆ ಹೆಚ್ಚು ಸಂಸದರನ್ನು ಗೆಲ್ಲಿಸಿದರೂ ರಾಜ್ಯಕ್ಕೆ ಏನು ಕೊಡುಗೆ ನೀಡಲಿಲ್ಲ. ಈ ಬಾರಿಯೂ ಜನ ಅವಕಾಶ ನೀಡಿದರೂ ಹಿತ ಕಾಯುತ್ತಿಲ್ಲ. ಕೃಷ್ಣಾ, ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ಯಾವುದೇ ನೀರಾವರಿ, ಶಿಕ್ಷಣ, ಉದ್ಯೋಗ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ’ ಎಂದು ದೂರಿದರು.

ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಈಟಿ, ಬಾಯಕ್ಕ ಮೇಟಿ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ, ಮಂಜುಳಾ ಭೋಸಾರೆ, ಹನುಮಂತ ರಾಕುಂಪಿ, ರಜಾಕ ಬೆಣೂರ, ರಾಜು ಮನ್ನಿಕೇರಿ, ಮಹಾಂತೇಶ ಹಟ್ಟಿ, ಜಾಫರ್ ಬೇಪಾರಿ, ಅಯ್ಯುಬ್‌ ಪುಣೇಕಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.