ಬಾಗಲಕೋಟೆ: ಒತ್ತಡದ ಬದುಕಿನಿಂದ ಹೊರಬಂದು ಮಾನಸಿಕವಾಗಿ ಸದೃಢರಾಗಲು ಕ್ರೀಡಾ ಚಟುವಟಿಕೆಗಳು ಅವಶ್ಯ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಕಂದಾಯ ಇಲಾಖೆ ನೌಕರರ ಸಂಘ, ಜಿಲ್ಲಾ ಕಂದಾಯ ಇಲಾಖೆ ವಿವಿಧ ವೃಂದ ಸಂಘಗಳ ಸಹಯೋಗದಲ್ಲಿ ಕಂದಾಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮನುಷ್ಯನಿಗೆ ಮಾನಸಿಕ ಮತ್ತು ಆರೋಗ್ಯ ಮುಖ್ಯವಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ಕ್ರೀಡೆಗಳಿಂದ ದೈಹಿಕವಾಗಿಯೂ ಸದೃಢರಾಗಲು ಸಾದ್ಯವಾಗುತ್ತದೆ ಎಂದರು.
ಸರ್ಕಾರಿ ನೌಕರರಿಗೆ ಒತ್ತಡ ಜಾಸ್ತಿ. ಆರೋಗ್ಯ ತಪಾಸಣೆ ಮಾಡಿದ ವರದಿಯಲ್ಲಿ ನೌಕರರ ರಕ್ತದ ಒತ್ತಡ ಹೆಚ್ಚಿಗಿರುವುದು ಕಂಡುಬಂದಿದೆ. ಆದ್ದರಿಂದ ಒತ್ತಡದ ಬದುಕಿನಿಂದ ಹೊರಬಂದು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಕ್ರೀಡೆಗಳಲ್ಲಿ ಸ್ಪಾರ್ಧಾ ಮನೋಭಾವನೆ ಮುಖ್ಯ. ಸೋಲು-ಗೆಲುವು ಸಾಮಾನ್ಯ. ಕ್ರೀಡೆ ಕೇವಲ ಮನರಂಜನೆಗೆ ಮಾತ್ರವಲ್ಲ, ಆರೋಗ್ಯ ಸುಧಾರಣೆಗೂ ಸಹಾಯವಾಗುತ್ತದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಆರೋಗ್ಯವಂತರಾದಾಗ ಮಾತ್ರ ಚೆನ್ನಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಕೇವಲ ಉತ್ತಮ ಆಹಾರ ಸೇವಿಸಿದರೆ ಸಾಲದು ಕ್ರೀಡೆ, ವ್ಯಾಯಾಮ ಅಗತ್ಯವಾಗಿವೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ನೌಕರರು ವರ್ಷಪೂರ್ತಿ ಕೆಲಸ ಮಾಡಿದ್ದು, ಈ ಎರಡು ದಿನ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಇದರಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆ ಬರುವುದಿಲ್ಲ. ಆರೋಗ್ಯ ಸಹ ಚೆನ್ನಾಗಿ ಇರುತ್ತದೆ ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ ಮಾತನಾಡಿದರು.
ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ರಾಜ್ಯ ಕಂದಾಯ ಇಲಾಖೆ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಚಿದಾನಂದ ವಡವಡಗಿ, ಗೌರವಾಧ್ಯಕ್ಷ ಮಲ್ಲಿಕಾರ್ಜುನ ಗುಡೂರ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.