ADVERTISEMENT

ತಾಡಪಾಲು ಹಂಚಿಕೆ: ನಿಗಾ ವಹಿಸಿ

ಜಿಲ್ಲಾ ಪಂಚಾಯ್ತಿ ಮಾಸಿಕ ಕೆಡಿಪಿ ಸಭೆ: ಅಧ್ಯಕ್ಷೆ ಬಾಯಕ್ಕ ಮೇಟಿ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2019, 14:57 IST
Last Updated 11 ನವೆಂಬರ್ 2019, 14:57 IST
ಬಾಗಲಕೋಟೆಯ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಜಿಲ್ಲಾ ಪಂಚಾಯ್ತಿಯ ಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯ್ತಿ ಸದಸ್ಯರು ಹಾಗೂ ಅಧಿಕಾರಿಗಳು. 
ಬಾಗಲಕೋಟೆಯ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಜಿಲ್ಲಾ ಪಂಚಾಯ್ತಿಯ ಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯ್ತಿ ಸದಸ್ಯರು ಹಾಗೂ ಅಧಿಕಾರಿಗಳು.    

ಬಾಗಲಕೋಟೆ: ‘ರೈತ ಸಂಪರ್ಕ ಕೇಂದ್ರಗಳಿಗೆ ಬರುವ ರೈತರಿಗೆ ಬೀಜ, ಗೊಬ್ಬರ ಹಾಗೂ ಬೆಳೆಗೆ ಸಿಂಪಡಿಸುವ ಔಷಧಿಗಳ ಬಗ್ಗೆ ಸರಿಯಾದ ಮಾಹಿತಿ ನೀಡಿ’ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಾಯಕ್ಕ ಮೇಟಿ ಸೂಚಿಸಿದರು.

ಜಿಲ್ಲಾ ಪಂಚಾಯ್ತಿಯ ಮಾಸಿಕ ಕೆಡಿಪಿ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ’ರೈತ ಸಂಪರ್ಕ ಕೇಂದ್ರಗಳಲ್ಲಿ ಅಧಿಕಾರಿಗಳು ರೈತರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಅದು ಸಲ್ಲ. ಆ ಬಗ್ಗೆ ಹಿರಿಯ ಅಧಿಕಾರಿಗಳು ನಿಗಾ ಇಟ್ಟು, ರೈತ ಸಂಪರ್ಕ ಕೇಂದ್ರಗಳ ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು’ಎಂದರು.

‘ತಾಡಪಾಲು ಸಹ ರೈತರಿಗೆ ಸರಿಯಾಗಿ ಹಂಚಿಕೆ ಮಾಡುತ್ತಿಲ್ಲ. ಈ ಬಗ್ಗೆ ಹೋಬಳಿ ಮಟ್ಟದಲ್ಲೂ ಅಧಿಕಾರಿಗಳ ಸಭೆ ನಡೆಸಿ, ಸರಿಯಾಗಿ ವಿತರಣೆಯಾಗುವಂತೆ ಕ್ರಮವಹಿಸಬೇಕು. ರೈತರಿಗೆ ಲಾಭದಾಯಕ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ, ಇಲಾಖೆಯ ಪ್ರತಿಯೊಂದು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು’ ಎಂದರು.

ADVERTISEMENT

ಜಿಲ್ಲಾ ಪಂಚಾಯ್ತಿ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ‘ಕವಿತಾ ಮಿಶ್ರಾ ಎಂಬ ಮಹಿಳೆ ಕೇವಲ ಎಂಟು ಎಕರೆ ಜಮೀನಿನಲ್ಲಿ ಶ್ರೀಗಂಧದದ ಜೊತೆಗೆ ದಾಳಿಂಬೆ, ಪೇರಲ ಸೇರಿದಂತೆ ತರಹೇವಾರಿ ಹಣ್ಣುಗಳನ್ನು ಬೆಳೆದಿದ್ದಾರೆ. ಮಿಶ್ರ ಬೆಳೆ ಬೆಳೆಯುವುದರಿಂದ ಆಗುವ ಲಾಭವನ್ನು ಸ್ವತಃ ನೋಡಿ ಕಲಿಯುವಂತೆ ಮಾಡಿದ್ದಾರೆ. ಜೊತೆಗೆ ಜಾನುವಾರು ಸಹ ಸಾಕುತ್ತಿದ್ದಾರೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್‌ಗಳ ಆವರಣಗಳಲ್ಲಿ ಗಿಡಗಳ ನೆಡುವ ಕಾರ್ಯಮಾಡಬೇಕು. ಉದ್ಯೋಗ ಖಾತರಿ ಯೋಜನೆಯ ಲಾಭ ರೈತರು ಪಡೆದುಕೊಳ್ಳುವಂತೆ ಮಾಡಬೇಕು’ ಎಂದುಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಎ.ಜಿ.ತೋಟದ, ಯೋಜನಾ ನಿರ್ದೇಶಕ ವಿ.ಎಸ್.ಹಿರೇಮಠ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.