ADVERTISEMENT

ಪಂಚಮಸಾಲಿ ಸಮಾಜ; ಮೂವರಿಗೆ ಸಚಿವ ಸ್ಥಾನ ಕೊಡಿ

ಬಿಜೆಪಿ ಹೈಕಮಾಂಡ್‌ಗೆ ಕೂಡಲಸಂಗಮಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 3 ಜನವರಿ 2020, 13:11 IST
Last Updated 3 ಜನವರಿ 2020, 13:11 IST
ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬಸವ ಜಯಮೃತ್ಯುಂಜಯ ಸ್ವಾಮೀಜಿ   

ಬಾಗಲಕೋಟೆ: ಬಿಜೆಪಿಯಿಂದ ಲಿಂಗಾಯತ ಪಂಚಮಸಾಲಿ ಸಮಾಜದಿಂದ 15 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರಲ್ಲಿ ಮುರಗೇಶ ನಿರಾಣಿ, ಬಸನಗೌಡ ಪಾಟೀಲ ಯತ್ನಾಳ, ಸಿದ್ದು ಸವದಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಿದ್ದಲ್ಲಿ ಶಾಸಕರಾದ ಉಮೇಶ ಕತ್ತಿ, ಬಸನಗೌಡ ಪಾಟೀಲ ಯತ್ನಾಳ ಹಾಗೂ ಮುರುಗೇಶ ನಿರಾಣಿ ಅದಕ್ಕೆ ಅರ್ಹರಿದ್ದಾರೆ. ಅವರಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಹೆಚ್ಚಿನ ನೆರವು ಕೊಡಿ

ADVERTISEMENT

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯ ಸರ್ಕಾರ ಕೇಳಿದಷ್ಟು ಪರಿಹಾರವನ್ನು ಕೇಂದ್ರದಿಂದ ಬಿಡುಗಡೆ ಮಾಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತ್ರಸ್ತರ ಕಣ್ಣೀರು ಒರೆಸಲು ಮುಂದಾಗಲಿ ಎಂದು ಸಲಹೆ ನೀಡಿದ ಶ್ರೀಗಳು, ಈಗ ಬಿಡುಗಡೆ ಮಾಡಿರುವ ₹1200 ಕೋಟಿ ಅನುದಾನ ಯಾವುದಕ್ಕೂ ಸಾಲುವುದಿಲ್ಲ ಎಂದರು.

ಗಡಿ ವಿವಾದಕ್ಕೆ ಸಂಬಂಧಿಸಿದಂತೆಮಹಾಜನ್ ವರದಿಯನ್ನು ಮಹಾರಾಷ್ಟ್ರ ಸರ್ಕಾರ ಒಪ್ಪಿಕೊಳ್ಳಬೇಕು. ಮಹಾರಾಷ್ಟ್ರದ ಗಡಿ ಭಾಗದಲ್ಲಿ ಕನ್ನಡಿಗರು, ಮರಾಠಿಗರು ಶಾಂತಿ ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿದ್ದು, ಶಿವಸೇನೆ ನಾಯಕರು ವಿನಾಕಾರಣ ಗಡಿ ವಿಷಯದಲ್ಲಿ ವಿವಾದ ಸೃಷ್ಟಿಸಬಾರದು ಎಂದರು.

ಸಮಾಜದ ಮುಖಂಡರಾದ ಎಸ್.ಎನ್.ರಾಂಪುರ, ಮಂಜುನಾಥ ಪುರತಗೇರಿ, ಸಂಗಮೇಶ ದೊಡಮನಿ, ಲಕ್ಷ್ಮಣ ನಿರಾಣಿ, ಶಿವಕುಮಾರ ಗಂಗಲ್, ಹನುಮಂತ ಕುಂಟೋಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.