ADVERTISEMENT

ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಅವಶ್ಯ: ಸಂಗಪ್ಪ

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 5:14 IST
Last Updated 25 ಅಕ್ಟೋಬರ್ 2025, 5:14 IST
ಬಾಗಲಕೋಟೆಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿದರು
ಬಾಗಲಕೋಟೆಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿದರು   

ಬಾಗಲಕೋಟೆ: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಪಡೆಯಬೇಕು. ಪರವಾನಗಿ ಪಡೆಯದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ತಂಬಾಕು ಮಾರಾಟ ನಿಷೇಧಿಸಬೇಕು. ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ವಲಯಗಳು ಎಂದು ಘೋಷಣೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ತಂಬಾಕು ಮುಕ್ತ ಯುವ ಅಭಿಯಾನ ಈಗಾಗಲೇ ಆರಂಭವಾಗಿದ್ದು, ನ.30ರವರೆಗೆ ನಡೆಯಲಿದೆ. ಅಭಿಯಾನದಡಿ ದಂಡ ವಿಧಿಸಬೇಕು. ತನಿಖಾ ದಳವು ಕಾರ್ಯಾಚರಣೆ ನಡೆಸಬೇಕು. ಶಾಲೆ, ಕಾಲೇಜು ಹಾಗೂ 30 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಶಾಲಾ– ಕಾಲೇಜುಗಳ 100 ಮೀಟರ್ ಒಳಗೆ ತಂಬಾಕು ಮಾರಾಟ ಮಾಡದಂತೆ ನೋಡಿಕೊಳಬೇಕು. ಮಕ್ಕಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲೆಯ ಬಾರ್‌ಗಳಲ್ಲಿ ಧೂಮಪಾನ ನಿಷೇಧಿಸಬೇಕು. ಕೋಟ್ಪಾ ಕಾಯ್ದೆಯಡಿ ನಾಮಫಲಕ ಪ್ರದರ್ಶನ ಮಾಡಬೇಕು ಎಂದರು.

ತಂಬಾಕು ಮುಕ್ತ ಕಾರ್ಯಕ್ರಮಗಳನ್ನು ಕೇವಲ ಆಚರಣೆ ಮಟ್ಟಕ್ಕೆ ಸೀಮಿತಗೊಳಿಸದೆ, ನೈಜ ಫಲಿತಾಂಶ ಬರಬೇಕು. ಶಾಲೆ, ಕಾಲೇಜುಗಳಲ್ಲಿ ಮಾತ್ರವಲ್ಲದೆ ಬಸ್ ನಿಲ್ದಾಣಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ವಿರೋಧಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ್ವರ ಜಿದ್ದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ ಡಿ.ಎನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ದಯಾನಂದ ಕರೆನ್ನವರ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕುಮಠಳ್ಳಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.