
ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನಗೊಂಡ ರೈತರಿಗೆ ಆದ್ಯತೆ ಮೇರೆಗೆ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಕುರಿತ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಐತಿಹಾಸಿಕ ತೀರ್ಪಿನನ್ವಯ ಭೂಸ್ವಾಧೀನಗೊಂಡ ರೈತರಿಗೆ ಸೂಕ್ತ ಪರಿಹಾರ ಸರ್ಕಾರ ಘೋಷಿಸಿದೆ. ಭೂಮಿ ಕಳೆದುಕೊಳ್ಳುವ ರೈತರಿಗೆ ಆದ್ಯತೆಯ ಮೇರೆಗೆ ಪರಿಹಾರ ವಿತರಣೆಗೆ ಕ್ರಮವಹಿಸಬೇಕಿದೆ. ಈಗಾಗಲೇ ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣಗಳು ನ್ಯಾಯಾಲಯದ ಹಂತದಲ್ಲಿದ್ದು, ಐತೀರ್ಪಿನನ್ವಯ ಪರಿಹಾರ ವಿತರಣೆಗೆ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದರು.
ನ್ಯಾಯಾಲಯದ ಅನುಮತಿ ಪಡೆದುಕೊಂಡ ನಂತರ ಭೂಸ್ವಾಧೀನಗೊಳ್ಳುವ ಗ್ರಾಮಗಳನ್ನು ಆದ್ಯತೆಯ ಮೇರೆಗೆ ಪಟ್ಟಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ಮುಳುಗಡೆಯಾಗುತ್ತದೆ ಎಂಬುದನ್ನು ಗುರುತು ಮಾಡಬೇಕು. ಬಜೆಟ್ ನಂತರ ಮುಖ್ಯಮಂತ್ರಿ ಜಿಲ್ಲೆಗೆ ಬರಲಿದ್ದು, ಅದಕ್ಕೂ ಪೂರ್ವದಲ್ಲಿ ಪರಿಹಾರ ವಿತರಣೆಯ ಪಟ್ಟಿ ಸಿದ್ದವಾಗಿರಬೇಕು ಎಂದು ಹೇಳಿದರು.
ಪುನರ್‌ವಸತಿ ಕೇಂದ್ರಗಳನ್ನು ವರ್ಗಾವಣೆ ಮಾಡಲಾಗಿದೆ. ಅವುಗಳಲ್ಲಿ ಕೆಲವು ಮೂಲಸೌಲಭ್ಯಗಳು ಬೇಕಾಗಿದ್ದು, ಪುನರ್‌ವಸತಿ ಕೇಂದ್ರಗಳಲ್ಲಿ ಉಳಿಕೆ ಜಾಗವನ್ನು ಗ್ರಾಮ ಪಂಚಾತಿತಿಗೆ ಹಸ್ತಾಂತರಿಸುವ ಕೆಲಸವಾಗಬೇಕು ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.
ಪುನರ್‌ವಸತಿ ಕೇಂದ್ರಗಳಲ್ಲಿ ಶಾಲೆ, ಪಿಕೆಪಿಎಸ್ ಕಟ್ಟಲಿಕ್ಕೆ ಯಾವುದೇ ರೀತಿಯಲ್ಲಿ ಅನಾವಶ್ಯಕ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಬೆಳಗಾವಿ ವಿಭಾಗದ ಆಯುಕ್ತರಾದ ಜಾನಕಿ ಕೆ.ಎಂ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಶಶಿಧರ ಕುರೇರ, ಯುಕೆಪಿ ಮಹಾವ್ಯವಸ್ಥಾಪಕ ಗಜಾನನ ಬಾಲೆ, ಯುಕೆಪಿ ವಿಶೇಷ ಜಿಲ್ಲಾಧಿಕಾರಿ ಮಹಾದೇವ ಮುರುಗಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.