ಬಾಗಲಕೋಟೆಯಲ್ಲಿ ಬುಧವಾರ ವಿವಿಧ ಯೋಜೆನೆಗಳಡಿ ಧನ ಸಹಾಯ ಪಡೆದವರಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಚೆಕ್ ವಿತರಿಸಿದರು
ಬಾಗಲಕೋಟೆ: ‘ರಾಜ್ಯದಲ್ಲಿ ಶೇ 85ರಷ್ಟು ಕಾರ್ಮಿಕರು ಅಸಂಘಟಿತರಾಗಿದ್ದು, ಅವರಿಗೆ ಸರ್ಕಾರದಿಂದ ಸೌಲಭ್ಯ ಒದಗಿಸುವ ಕೆಲಸ ಮಾಡಲಾಗುತ್ತಿದೆ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ನವನಗರದ ಕಲಾಭವನದಲ್ಲಿ ಬುಧವಾರ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಅಸಂಘಟಿತ ವಲಯದ ಕಾರ್ಮಿಕರು ಸಾಮಾಜಿಕ, ಆರ್ಥಿಕವಾಗಿ ದುರ್ಬಲರಾಗಿದ್ದು, ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅಂತಹ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲಾಗುವುದು’ ಎಂದರು.
‘ದೇಶದಲ್ಲಿ ತಾಸಿಗೆ 20 ಅಪಘಾತಗಳು ಸಂಭವಿಸುತ್ತವೆ. ಅಪಘಾತದಲ್ಲಿ ಮೃತರಾಗುವ ಕಾರ್ಮಿಕರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲಾಗುವುದು. ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಲು ಹೊಸದಾಗಿ ಮೂರು ಕಾನೂನು ರಚಿಸಲಾಗಿದೆ’ ಎಂದು ಹೇಳಿದರು.
‘25 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗಿದೆ. ಅಂಬೇಡ್ಕರ್ ಕಾರ್ಮಿಕರ ಸಹಾಯಹಸ್ತ, ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ’ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿ, ‘ಬೆವರು ಸುರಿಸಿ ಆಸ್ತಿವಂತರನ್ನಾಗಿ ಮಾಡಿದ ಕಾರ್ಮಿಕರು ಆರ್ಥಿಕ, ಸಾಮಾಜಿಕ ನೋವು ಅನುಭವಿಸುತ್ತಿದ್ದಾರೆ. ಅಂತಹವರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ’ ಎಂದರು
‘ವಿವಿಧ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಯೋಜನೆಗಳ ಸದುಪಯೋಗವನ್ನು ಕಾರ್ಮಿಕರು ಪಡೆದುಕೊಂಡಾಗಲೇ ಸರ್ಕಾರ ಯೋಜನೆಗಳು ಸಫಲವಾಗುತ್ತವೆ’ ಎಂದು ಹೇಳಿದರು.
ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಜಂಟಿ ಕಾರ್ಯದರ್ಶಿ ಎಸ್.ಬಿ. ರವಿಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಮಿಕರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್‌ಗಳನ್ನು ಹಾಗೂ ಚೆಕ್‌ಗಳನ್ನು ವಿತರಿಸಲಾಯಿತು.
ಶಾಸಕರಾದ ಜೆ.ಟಿ. ಪಾಟೀಲ, ವಿಜಯಾನಂದ ಕಾಶಪ್ಪನವರ, ಭೀಮಸೇನ ಚಿಮ್ಮನಕಟ್ಟಿ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಮಾಜಿ ಶಾಸಕ ಎಸ್.ಜಿ.ನಂಜಯ್ಯನವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಮೇಯರ್ ಅನಿಲಕುಮಾರ ಪಾಟೀಲ, ಕಾರ್ಮಿಕ ಇಲಾಖೆಯ ಬೆಳಗಾವಿ ಪ್ರಾದೇಶಿಕ ಉಪ ಆಯುಕ್ತ ಡಿ.ಜಿ.ನಾಗೇಶ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಸಿಇಒ ಶಶಿಧರ ಕುರೇರ, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ ಇದ್ದರು.
‘ಸಾಮಾನ್ಯ ವಸ್ತುಗಳ ಮೇಲೆಯೂ ಜಿಎಸ್‌ಟಿ’
ಬಾಗಲಕೋಟೆ: ‘ಕುಂಕುಮ, ಕರ್ಪೂರ, ಉದಿನಕಡ್ಡಿ, ಮೊಸರು ಸೇರಿದಂತೆ ಎಲ್ಲ ವಸ್ತುಗಳ ಮೇಲೆಯೂ ಕೇಂದ್ರ ಜಿಎಸ್‌ಟಿ ವಿಧಿಸಿದೆ. ಖಾತೆ ಹೊಂದಿರದಿದ್ದರೂ ಬಡವರು ತೆರಿಗೆ ಪಾವತಿಸಬೇಕಾಗಿದೆ’ ಎಂದು ಸಚಿವ ಸಂತೋಷ ಲಾಡ್ ಟೀಕಿಸಿದರು.
‘ದೇಶದ ಶೇ 1ರಷ್ಟು ಜನರು ಶೇ 50ರಷ್ಟು ಆಸ್ತಿ ಹೊಂದಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ದೇಶದ ಸಾಲ ನಾಲ್ಕುಪಟ್ಟು ಹೆಚ್ಚಾಗಿದೆ’ ಎಂದು ವಾಗ್ದಾಳಿ ನಡೆಸಿದರು.
‘ಕೇಂದ್ರ, ರಾಜ್ಯದ ಜನಪ್ರತಿನಿಧಿಗಳು ಮನೆಯಿಂದ ಹಣ ತಂದು ಕೊಡುವುದಿಲ್ಲ. ನಿಮ್ಮ ಹಣವನ್ನೇ ನಿಮಗೇ ನೀಡಲಾಗುತ್ತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಇದ್ದಾಗ ನರೇಗಾ, ಆರ್‌ಟಿಐ, ಆರ್‌ಟಿಇ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಯಾವ ಸರ್ಕಾರದಿಂದ ಲಾಭ ಆಗಿದೆ ಎಂಬುದನ್ನು ಜನರು ಗಮನಿಸಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.