ADVERTISEMENT

ಸಿಹಿ ಸುದ್ದಿ ಕೊಡಿ: ಸಿಎಂಗೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ

ಮೀಸಲಾತಿ ವಿಚಾರ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 7:16 IST
Last Updated 15 ಅಕ್ಟೋಬರ್ 2020, 7:16 IST
ಪ್ರಸನ್ನಾನಂದಪುರಿ ಸ್ವಾಮೀಜಿ
ಪ್ರಸನ್ನಾನಂದಪುರಿ ಸ್ವಾಮೀಜಿ   

ಬಾಗಲಕೋಟೆ: ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಅಕ್ಟೋಬರ್ 31ರೊಳಗೆ ಸಿಹಿ ಸುದ್ದಿ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಯಚೂರು ಜಿಲ್ಲೆ ಲಿಂಗಸಗೂರಿನಲ್ಲಿ ನಡೆದ ಪರಿಶಿಷ್ಟ ಪಂಗಡದ ಸಮಾವೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ಮೀಸಲಾತಿ ಹೆಚ್ಚಳಗೊಳಿಸುವುದಾಗಿ ಯಡಿಯೂರಪ್ಪ ಮಾತು ಕೊಟ್ಟಿದ್ದರು. ಫೆಬ್ರವರಿ 9ರಂದು ನಡೆದ ವಾಲ್ಮೀಕಿ ಜಾತ್ರೆಯಲ್ಲೂ ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಬಂದ ತಕ್ಷಣ ಮೀಸಲಾತಿ ಪ್ರಮಾಣ ಹೆಚ್ಚಿಸುವುದಾಗಿ ಹೇಳಿದ್ದರು. ಈಗೇಕೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸ್ವಾಮೀಜಿ ಪ್ರಶ್ನಿಸಿದರು.

ಶುಕ್ರವಾರ ಸಿಎಂ ಭೇಟಿಗೆ ಅವಕಾಶ ಸಿಕ್ಕರೆ ಅವರ ಬಳಿ ಇದನ್ನು ಪ್ರಸ್ತಾಪಿಸುವೆ. ಕೊಟ್ಟ ಮಾತು ಈಡೇರಿಸುವಂತೆ ಕೇಳುವೆ ಎಂದರು.

ADVERTISEMENT

ಶ್ರೀರಾಮುಲುಗೆ ಡಿಸಿಎಂ ಸ್ಥಾನ ಕೊಡದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸ್ವಾಮೀಜಿ, ಮುಂದಿನ ದಿನಗಳಲ್ಲಿ ನಮ್ಮ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಕೊಡಿ ಎಂದು ಕೇಳುತ್ತೇವೆ. ಅದಕ್ಕಿಂತ ಮುಖ್ಯವಾಗಿ ಸಮುದಾಯಕ್ಕೆ 7.5 ಮೀಸಲಾತಿ ಪಡೆಯಬೇಕು. ಹಾಗಾಗಿ ಜಿಲ್ಲಾವಾರು ಸಭೆ ಮಾಡುತ್ತಿದ್ದೇವೆ ಎಂದರು.

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ

ಅಕ್ಟೋಬರ್ 21ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ ಆರಂಭಿಸಲಿದ್ದೇವೆ. ಅಕ್ಟೋಬರ್ 31ರ ಮಹರ್ಷಿ ವಾಲ್ಮೀಕಿ ಜಯಂತಿಯೊಳಗೆ ಮೀಸಲಾತಿ ಹೆಚ್ಚಿಸದಿದ್ದಲ್ಲಿ ಹೋರಾಟ ಅನಿವಾರ್ಯ ಎಂದರು.

ಸಮಾಜಕ್ಕೆ ಮಾಡಿದ ಅನ್ಯಾಯ

ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಕೊಡುವುದಾಗಿ ಚುನಾವಣೆಗೆ ಮುನ್ನ ಬಿಜೆಪಿ ನಾಯಕರು ಹೇಳಿದ್ದನ್ನು ಮಾಧ್ಯಮದಲ್ಲಿ ನೋಡಿದ್ದೆನು. ಈಗ ಅವರಿಗೆ ಡಿಸಿಎಂ ಸ್ಥಾನ ಕೊಡದೇ ಇರೋದು ಸಮಾಜಕ್ಕೆ ಮಾಡಿದ ಅನ್ಯಾಯ ಎಂದರು.

ಆರೋಗ್ಯ ಸಚಿವ ‌ಸ್ಥಾನದಿಂದ ಬದಲಾವಣೆ ಮಾಡಿರುವ ವಿಚಾರದಲ್ಲಿ ಇನ್ನೂ ಶ್ರೀರಾಮುಲು ಅವರೊಂದಿಗೆ ನಾನು ಮಾತನಾಡಿಲ್ಲ..
ಯಾವ ಕಾರಣಕ್ಕೆ ಅವರ ಖಾತೆ ಬದಲಾವಣೆ ಆಗಿದೆ ಎಂಬ ವಿಚಾರದಲ್ಲಿ ಸ್ಪಷ್ಟತೆ ನನಗಿಲ್ಲ. ಯಾಕೆ ಹೀಗೆ ಆಗುತ್ತಿದೆ ಎಂದು
ಶ್ರೀರಾಮುಲು ಜೊತೆ ಮಾತನಾಡಿ ಪ್ರತಿಕ್ರಿಯಿಸುತ್ತೇನೆ ಎಂದು ಸ್ವಾಮೀಜಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.