ಬಾಗಲಕೋಟೆ: ವೃತ್ತಿಪರ ನೇಕಾರರಿಗೆ ಕಟ್ಟಡ ಕಾರ್ಮಿಕ ಸೌಲಭ್ಯಗಳನ್ನು ನೀಡಬೇಕು. ಗುರುತಿನ ಚೀಟಿ ಹಂಚಿಕೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಸದಸ್ಯರು ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
ನೇಕಾರರ ಸಾಲವನ್ನು ಒಂದು ಬಾರಿ ಸಂಪೂರ್ಣವಾಗಿ ಮನ್ನಾ ಮಾಡಬೇಕು. ಸಾಲದ ಹೊರೆಯಿಂದ ರಾಜ್ಯದಲ್ಲಿ 52 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಸದಸ್ಯರಿಗೆ ₹10 ಲಕ್ಷ ಪರಿಹಾರ ಧನ ಒದಗಿಸಬೇಕು. 55 ವರ್ಷ ಮೇಲ್ಪಟ್ಟ ನೇಕಾರರಿಗೆ ₹5ಸಾವಿರ ಮಾಸಾಶನ ನೀಡಬೇಕು ಎಂದು ಆಗ್ರಹಿಸಿದರು.
ನೇಕಾರಿಕೆ ಮಾಡುತ್ತಿರುವ ಮತ್ತು ಕೆಎಚ್‌ಡಿಸಿಯ ಸಾವಿರಾರು ಜನರಿಗೆ ಸಿಟಿಎಸ್ ಉತಾರಗಳಿಲ್ಲ. ಅವರಿಗೆ ನ್ಯಾಯ ಒದಗಿಸಬೇಕು. ನಿವೇಶನ ಇಲ್ಲದವರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಕೆಎಚ್‌ಡಿಸಿಯಲ್ಲಾಗಿರುವ ನೂರಾರು ಕೋಟಿ ರೂಪಾಯಿಗಳ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ ಯೋಜನೆಯಂತೆ ನೇಕಾರರಿಗೂ ಸಮ್ಮಾನ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೈಮಗ್ಗ ಮತ್ತು ಜವಳಿ ಇಲಾಖೆ, ಸೆಂಟ್ರಲ್ ಸಿಲ್ಕ್ ಬೋರ್ಡ್‌ಗೆ, ನಿಗಮಗಳಿಗೆ ಅನುದಾನ ನೀಡುತ್ತಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ದೇಶದ ಎಲ್ಲ ರೈಲು, ವಿಮಾನ ನಿಲ್ದಾಣಗಳಲ್ಲಿ ನೇಕಾರರ ಉತ್ಪನ್ನಗಳ ನೇರ ಮಾರಾಟಕ್ಕೆ ಮಳಿಗೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಮಾತನಾಡಿ, ನೇಕಾರಿಕೆಯ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ನೇಕಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೇಕಾರರು ಕೇವಲ ಓಟ್ ಬ್ಯಾಂಕ್ ಆಗಿ ಬಳಕೆಯಾಗುತ್ತಿವೆ. ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ರಾಜೇಂದ್ರ ಮಿರ್ಜಿ, ಸದಾಶಿವ ಬೋರ್ಗಿ, ಶ್ರೀನಿವಾಸ ಬಳ್ಳಾರಿ, ಗಂಗಪ್ಪ ವಂಟಗುಡಿ, ಲಕ್ಕಪ್ಪ ಪವಾರ, ಚಂದ್ರಶೇಖರ ಹೊನ್ನಳ್ಳಿ, ಬಸವರಾಜ ದುತ್ತರಗಿ, ಗಿರಿಮಲ್ಲಪ್ಪ ಕೈಸೋಲಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.