ADVERTISEMENT

ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2011, 7:35 IST
Last Updated 12 ಫೆಬ್ರುವರಿ 2011, 7:35 IST

ಬಳ್ಳಾರಿ: ಜಿಲ್ಲೆಯ ಅಭಿವೃದ್ಧಿಯ ದಷ್ಟಿಯಿಂದ ಎಲ್ಲ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಜನಾರ್ದನರೆಡ್ಡಿ ಸೂಚಿಸಿದರು.ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಸಂಪೂರ್ಣ ಸಹಕಾರ ನೀಡುವ ಮೂಲಕ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯ್ತಿಯ ನೂತನ ಸದಸ್ಯರ ಮೇಲೆ ವಿಶ್ವಾಸವಿದ್ದು, ಎಲ್ಲರೂ ಒಂದಾಗಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಶ್ರಮಿಸಿ ಎಂದು ಅವರು ಕಿವಿಮಾತು ಹೇಳಿದರು.ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದಲ್ಲಿ 23ನೇ ಸ್ಥಾನದಲ್ಲಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅತ್ಯುನ್ನತ ಐದು ಸ್ಥಾನಗಳಲ್ಲಿ ಒಂದಾಗಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ರಾಜ್ಯದಲ್ಲಿ 7ನೇ ಸ್ಥಾನದಲ್ಲಿದ್ದು, ಮಾನವ ಅಭಿವೃದ್ಧಿಯಲ್ಲಿ 18ನೇ ಸ್ಥಾನದಲಿದ್ಲೆ. ಆದಾಯದಲ್ಲಿ 4ನೇ ಸ್ಥಾನದಲ್ಲಿದೆ.   ಎಂದ ಅವರು, ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ನೀಡಬೇಕು.   ಆ ಫಲಾನುಭವಿಗಳ ಪಟ್ಟಿಯನ್ನು ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಕಾರ್ಯಾಲಯಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಬೇಕು ಎಂದು ಅವರು ಸೂಚಿಸಿದರು.

ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಯಾವುದೇ ಲೋಪಗಳಾಗದಂತೆ ಕ್ರಮ ಕೈಗೊಳ್ಳಬೇಕು.  ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಪ್ರತಿ 6 ತಿಂಗಳಿಗೊಮ್ಮೆ ಲೆಕ್ಕಪರಿಶೋಧನೆ ನಡೆಸಬೇಕು ಎಂದು ಅವರು ಹೇಳಿದರು.ಜಿಲ್ಲೆಯ ಸಂಪೂರ್ಣ ನೈರ್ಮಲ್ಯ ಆಂದೋಲನದಡಿ 50 ಗ್ರಾಮ ಪಂಚಾಯಿತಿಗಳನ್ನು ನಿರ್ಮಲ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಕುಡಿಯುವ ನೀರು ಸರಬರಾಜು ಯೋಜನೆಯಡಿ ಹಲವಾರು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸಹಾಯವಾಣಿ ತೆರೆಯಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಎನ್‌ಎಚ್‌ಆರ್‌ಎಂ ಯೋಜನೆ ಅಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ವೈದ್ಯರು, ಆರೋಗ್ಯ ಕಾರ್ಯಕರ್ತರು ಕೇಂದ್ರಸ್ಥಾನದಲ್ಲಿದ್ದು,  ಕಾರ್ಯ ನಿರ್ವಹಿಸಬೇಕು. ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.

ಜಿ.ಪಂ. ಅಧ್ಯಕ್ಷೆ ಅರುಣಾ ತಿಪ್ಪಾರೆಡ್ಡಿ, ಉಪಾಧ್ಯಕ್ಷ ಚೆನ್ನಬಸವನಗೌಡ, ಸಿಇಓ ಮುತ್ತಯ್ಯ, ಜಿಲ್ಲಾಧಿಕಾರಿ ಬಿ.ಶಿವಪ್ಪ, ಸಂಸದೆ ಜೆ.ಶಾಂತ ಉಪಸ್ಥಿತರಿದ್ದರು. ಸಭೆಗೆ ಮುನ್ನ, ಇತ್ತಿಚೆಗೆ ನಿಧನರಾದ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

‘ಐತಿಹಾಸಿಕ ಕೃಷಿ ಬಜೆಟ್’

ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಂಡಿಸಲಿರುವ ಕೃಷಿ ಬಜೆಟ್ ಐತಿಹಾಸಿಕ  ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ. ಜನಾರ್ದನ ರೆಡ್ಡಿ ತಿಳಿಸಿದರು.ನಗರದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಅಭ್ಯುದಯಕ್ಕಾಗಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪ್ರತ್ಯೇಕವಾದ ಕೃಷಿ ಬಜೆಟ್ ಮಂಡಿಸಲಾಗುತ್ತಿದೆ ಎಂದರು.

ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ರೈತರಿಗೆ ದಾಳಿಂಬೆ, ಅಂಜೂರ ಬೆಳೆಗಳು ಹಾನಿಗೊಳಗಾಗಿ ಅಪಾರ ನಷ್ಟವುಂಟಾಗಿದೆ. ಈ ಕುರಿತು ತೋಟಗಾರಿಕಾ ಅಧಿಕಾರಿಗಳು ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದ್ದು, ನಷ್ಟಕ್ಕೊಳಗಾದ ರೈತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.