ADVERTISEMENT

‘ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ’

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2017, 5:26 IST
Last Updated 16 ಅಕ್ಟೋಬರ್ 2017, 5:26 IST

ಕೂಡ್ಲಿಗಿ: ಮಹಿಳೆಯರಿಗೆ ಹೆಚ್ಚು ಮೀಸಲಾತಿ ಕಲ್ಪಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ರಾಜಕೀಯ ಪ್ರಾತಿನಿಧ್ಯ ಪಡೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಆಶಾಲತಾ ಹೇಳಿದರು.

ಪಟ್ಟಣದ ವಾಸವಿ ಶಾಲೆಯಲ್ಲಿ ಭಾನುವಾರ ಕೂಡ್ಲಿಗಿ ಹಾಗೂ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕ ಏರ್ಪಡಿಸಿದ್ದ ಅರಿಶಿಣ–ಕುಂಕುಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ರಾಜ್ಯ ಮಹಿಳಾ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ಅವರ ಸೂಚನೆಯಂತೆ ಮಹಿಳೆಯರಿಗೆ ಅರಿಶಿಣ, ಕುಂಕುಮ ನೀಡುವ ಮೂಲಕ ಪ್ರತಿ ಮನೆ ಮನೆಗೆ ತೆರಳಿ, ಪಕ್ಷವನ್ನು ಸಂಘಟಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರಿಗೆ ನೀಡಿರುವ ಜನಪರ ಕೊಡುಗೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾಗಿದೆ’ ಎಂದು ತಿಳಿಸಿದರು.]

ADVERTISEMENT

ಹಿರಿಯ ನಾಯಕಿ ಜಿ. ನಾಗಮಣಿ ಮಾತನಾಡಿ, ‘ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.

ಇತ್ತೀಚೆಗೆ ಜಾರಿಗೆ ತಂದ ಮಾತೃಪೂರ್ಣ ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಪದವಿವರೆಗೂ ಉಚಿತ ಶಿಕ್ಷಣ ನೀಡುತ್ತಿದೆ. ಹಾಗಾಗಿ ಯೋಜನೆಗಳ ಬಗ್ಗೆ ಮನೆ ಮನೆಗೆ ತಲುಪಿಸಲು ಶ್ರಮಿಸಬೇಕು’ ಎಂದು ಹೇಳಿದರು.

ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಕೆ. ಪದ್ಮಾವತಿ, ಉಪಾಧ್ಯಕ್ಷೆ ಗೀತಾ ಕಾವಲ್ಲಿ, ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಮತ, ಜಿಲ್ಲಾ ಘಟಕದ ಉಪಾಧ್ಯಕ್ಷೆ ಪುಷ್ಪಾವತಿ, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ, ಮಂಡಲ ಪಂಚಾಯ್ತಿ ಮಾಜಿ ಪ್ರಧಾನರಾದ ಸರೋಜಮ್ಮ ಇದ್ದರು. ಕೂಡ್ಲಿಗಿ ಹಾಗೂ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್‌ನ ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.