ಬಳ್ಳಾರಿ: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಸರ್ಕಾರದ ವಿವಿಧ ಹುದ್ದೆಯಲ್ಲಿರುವ ಅಧಿಕಾರಿಗಳ, ನೌಕರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಎನ್. ಮಂಜುನಾಥ್ ಒತ್ತಾಯಿಸಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸರ್ಕಾರದ ವಿವಿದ ಇಲಾಖೆಗಳ ಸುಮಾರು 4 ಲಕ್ಷ ನೌಕರರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ನಾರಾಯಣ ಸ್ವಾಮಿ ಅವರೇ ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ.
ಯಾವ ಹಂತದಲ್ಲಿ, ಯಾವ ಅಧಿಕಾರಿಗಳು ನಕಲಿ ಪ್ರಮಾಣ ಪತ್ರ ಸಲ್ಲಿಸಿ, ನೌಕರಿ ಪಡೆದಿದ್ದಾರೆ ಎಂಬುದನ್ನು ಅವರು ಕೂಡಲೇ ಬಹಿರಂಗಪಡಿಸಬೇಕು. ಜತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಭ್ರಷ್ಟಾಚಾರದಿಂದ ಕೂಡಿರುವ ಬಿಜೆಪಿ ಸರ್ಕಾರ ಶೀಘ್ರದಲ್ಲೇ ಪತನವಾಗಲಿದ್ದು, ಮುಂದಿನ ಆರು ತಿಂಗಳೊಳಗೆ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷ 224 ಕ್ಷೇತ್ರಗಳಲ್ಲಿ 170ಕ್ಕೂ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬರಲು ಈಗಾಗಲೇ 224 ಕ್ಷೇತ್ರಗಳ ಪೈಕಿ 51ಎಸ್‌ಸಿ, ಎಸ್‌ಟಿ ಕ್ಷೇತ್ರಗಳಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯ ಜನರನ್ನು ಒಗ್ಗೂಡಿಸುವ ಕೆಲಸ ನಡೆದಿದೆ ಎಂದರು.
ಚುನಾವಣೆಯ ಕಾರ್ಯತಂತ್ರ ರೂಪಿಸುವ ಹಿನ್ನೆಲೆಯಲ್ಲಿ ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ದಲಿತ ಸಮಾವೇಶ ಹಮ್ಮಿಕೊಳ್ಳಲಾಗಿದೆ. ದಲಿತ ಸಮುದಾಯದ ಎಲ್ಲ 101 ಜಾತಿಗಳನ್ನು ಒಂದೇ ವೇದಿಕೆಯಡಿ ಸೇರಿಸಲಾಗು ವುದು. ರಾಜ್ಯ ಮಟ್ಟದ ದಲಿತ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.
ನಾಲ್ಕು ವರ್ಷಗಳ ಅವಧಿಯಲ್ಲಿ ಬಿಜೆಪಿ ಸರ್ಕಾರ ನಡೆಸಿದ ಹಗರಣ, ಭ್ರಷ್ಟಾಚಾರಗಳಿಂದ ರಾಜ್ಯದ ಮಾನ ಹರಾಜಾಗಿದೆ. ಅಧಿಕಾರಕ್ಕೆ ಬಂದ ದಿನದಿಂದ ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ. ದಲಿತರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ.
2004ರಲ್ಲಿ ಎಸ್.ಎಂ. ಕೃಷ್ಣ ಸರ್ಕಾರ 18 ಸಾವಿರ ಬ್ಯಾಕ್‌ಲಾಗ್ ಹುದ್ದೆ ಗಳನ್ನು ಭರ್ತಿ ಮಾಡಿತ್ತು. ಆದರೆ, ಬಿಜೆಪಿ ಸರ್ಕಾರ ಈವರೆಗೂ ಬ್ಯಾಕ್‌ಲಾಗ್ ಹುದ್ದೆ ಭರ್ತಿ ಮಾಡಿಲ್ಲ. ಸರ್ಕಾರ ಆದ್ಯತೆ ಮೇರೆಗೆ ಹುದ್ದೆ ಭರ್ತಿ ಮಾಡಬೇಕು ಎಂದು ಅವರು ಕೋರಿದರು.
ರಾಜ್ಯದಲ್ಲಿ 14 ಸಚಿವರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೂಡಲೇ ಲೋಕಾಯುಕ್ತ ರನ್ನು ನೇಮಿಸಬೇಕು. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು, ಅಭಿವೃದ್ಧಿ ಮರೀಚಿಕೆ ಯಾಗಿದೆ ಎಂದು ಅವರು ದೂರಿದರು. ಮಾನಯ್ಯ, ವಿ.ಕೆ. ಬಸಪ್ಪ, ಅರುಣ್‌ಕುಮಾರ್, ಕಮಲಮ್ಮ ಮರಿಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.