ADVERTISEMENT

`ಪದವಿ ಪ್ರವೇಶ ಶುಲ್ಕ ಕಡಿಮೆ ಮಾಡಿ'

​ಪ್ರಜಾವಾಣಿ ವಾರ್ತೆ
Published 22 ಜೂನ್ 2013, 9:50 IST
Last Updated 22 ಜೂನ್ 2013, 9:50 IST

ಬಳ್ಳಾರಿ:  ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಿದ್ದ ವಿಶ್ವವಿದ್ಯಾಲಯವು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ)ಯ ಜಿಲ್ಲಾ ಘಟಕದ ಮನವಿಯ ಮೇರೆಗೆ  ಶುಲ್ಕ ಕಡಿಮೆ ಮಾಡಲು ಒಪ್ಪಿಗೆ ಸೂಚಿಸಿದೆ.

ಇತ್ತೀಚೆಗಷ್ಟೇ ನಗರದ ಸರಳಾದೇವಿ ಸತೀಶಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿ ಸಂಘಟನೆ ಸಲ್ಲಿಸಿದ್ದ ಮನವಿಯ ಮೇರೆಗೆ ವಿವಿ ಕುಲಪತಿಯವರು ಶುಲ್ಕ ಹೆಚ್ಚಳವನ್ನು ಕಡಿಮೆ ಮಾಡಲು ಒಪ್ಪಿದ್ದಾರೆ.

ಶುಕ್ರವಾರ ವಿಶ್ವವಿದ್ಯಾಲಯಕ್ಕೆ ತೆರಳಿದ ಸಂಘಟನೆಯ ನಿಯೋಗ ಈ ಕುರಿತ ಸಲ್ಲಿಸಿದ ಮನವಿ ಸ್ವೀಕರಿಸಿದ ಕುಲಪತಿ ಡಾ.ಮಂಜಪ್ಪ ಹೊಸಮನೆ, ವಿವಿ ವ್ಯಾಪ್ತಿಯ ಎಲ್ಲ ಸರ್ಕಾರಿ ಪದವಿ ಕಾಲೇಜುಗಳ ಪ್ರವೇಶ ಶುಲ್ಕವನ್ನು ಈ ಸಾಲಿನಿಂದ ರೂ 200ರಷ್ಟು ಹೆಚ್ಚಳ ಮಾಡಲಾಗಿದ್ದು, ಅದರಲ್ಲಿ ರೂ 100 ಕಡಿಮೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈಗಾಗಲೇ ಸ್ವೀಕರಿಸಲಾಗಿರುವ ಹೆಚ್ಚುವರಿ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಮರಳಿಸುವಂತೆ ಎಲ್ಲ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.

ಸಂಘದ ಜಿಲ್ಲಾ ಕಾರ್ಯದರ್ಶಿ ಗೋವಿಂದ್, ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ, ಸದಸ್ಯರಾದ ಯರಿಸ್ವಾಮಿ, ಸುರೇಶ, ರಘು, ವಿನೂತ್, ಸಲೀಂ ಈ ಸಂದರ್ಭ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.