ADVERTISEMENT

ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2012, 4:20 IST
Last Updated 2 ಅಕ್ಟೋಬರ್ 2012, 4:20 IST

ಬಳ್ಳಾರಿ: ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಪಿಯುಸಿ (ಪದವಿಪೂರ್ವ ಶಿಕ್ಷಣ) ವಲಯದ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಹಾಗೂ ಉಪನ್ಯಾಸಕರ ಸಂಘವು ನಗರದ ಬಸವ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಗುಣಾತ್ಮಕ ಶಿಕ್ಷಣಕ್ಕಾಗಿ ಗರಿಷ್ಠ ಪ್ರಮಾಣದ ಸೌಕರ್ಯ ನೀಡಲು ಸರ್ಕಾರ ಯತ್ನಿಸುತ್ತಿದೆ. ಕಾಲೇಜುಗಳಿಗೆ ಅಗತ್ಯ ಮೂಲ ಸೌಲಭ್ಯ ಹಾಗೂ ಉಪನ್ಯಾಸಕ ಸಿಬ್ಬಂದಿ ನೇಮಕಕ್ಕೂ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ 5 ಸಾವಿರ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ತಜ್ಞರ ಸಲಹೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿದರು.

ರಾಜ್ಯದ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ದೊರೆಯಬೇಕು. ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಸ್ಪರ್ಧೆ ಎದುರಿಸುವಂತಾಗಬೇಕು ಎಂಬುದೇ ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಕಾಲೇಜುಗಳಿಗೆ ಅಗತ್ಯ  ಸೌಲಭ್ಯ ನೀಡಲು ಸಿದ್ಧ ಎಂದು ಅವರು ಭರವಸೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಉದ್ದೇಶ ಸರ್ಕಾರಕ್ಕಿಲ್ಲ. ದೇಶದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರು ಈ ನೀತಿಯನ್ನು ವಿರೋಧಿಸಿ, ಅನುಷ್ಠಾನ ಬೇಡ ಎಂದು ಒತ್ತಾಯವನ್ನೂ ಮಾಡಿಯಾಗಿದೆ. ಆದರೆ, ಕೇಂದ್ರ ಸರ್ಕಾರ ರಾಜ್ಯಗಳ ಶಿಕ್ಷಣ ಸಚಿವರ ಮನವಿಯನ್ನು ಪುರಸ್ಕರಿಸುವ ಸ್ಥಿತಿಯಲ್ಲಿಲ್ಲ. ಕೇಂದ್ರ ಸರ್ಕಾರದ ಒತ್ತಾಯದಿಂದಲೇ ರಾಜ್ಯದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಲಾಗುತ್ತಿದೆ. ಉಪನ್ಯಾಸಕರಿಗೆ ಸೂಕ್ತ ತರಬೇತಿ ನೀಡಲಾಗುತ್ತಿದ್ದು, ಸಮರ್ಥವಾಗಿ ನಿಭಾಯಿಸುವ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಕಾಗೇರಿ ಹೇಳಿದರು.

ಉಪನ್ಯಾಸಕರು ಹಾಗೂ ಪ್ರಾಚಾರ್ಯರ ಬೇಡಿಕೆಗಳನ್ನು ಈಡೇರಿಸುವ ಉತ್ಸಾಹ ಇದೆ. ಅದಕ್ಕೆ ಸಮಯ ಬೇಕು. ಶೀಘ್ರವೇ ಮತ್ತೆ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ರಾಜ್ಯ ಪ.ಪೂ. ನೌಕರರ ಸಂಘದ ಅಧ್ಯಕ್ಷ ಎಸ್.ವಿ. ಸಂಕನೂರು ಉಪನ್ಯಾಸಕರ ಬೇಡಿಕೆಗಳ ಕುರಿತು ವಿವರಿಸಿದರು.

ವಿಧಾನ ಪರಿಷತ್ ಸದಸ್ಯರಾದ ಅಮರನಾಥ ಪಾಟೀಲ್, ಶಶಿಲ್ ನಮೋಶಿ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಕೆ.ಎ. ರಾಮಲಿಂಗಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಶೇಖರ, ಎಂ. ಮೋಹನರೆಡ್ಡಿ,  ಪ್ರಸಾದ ರೆಡ್ಡಿ, ಮುನಿರಾಜು, ಮಲ್ಲೇಶ್, ವೆಂಕಟೇಶ್, ನಾಗಭೂಷಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.