ADVERTISEMENT

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿಯರ ಧರಣಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2013, 19:59 IST
Last Updated 15 ಜುಲೈ 2013, 19:59 IST
ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ದೇವದಾಸಿ     ಮಹಿಳೆಯರು ಬಳ್ಳಾರಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ದೇವದಾಸಿ ಮಹಿಳೆಯರು ಬಳ್ಳಾರಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.   

ಬಳ್ಳಾರಿ: ರಾಜ್ಯ ಬಜೆಟ್‌ನಲ್ಲಿ ದೇವದಾಸಿ ಮಹಿಳೆಯರನ್ನು ಕಡೆಗಣಿಸಿರುವುದನ್ನು ಖಂಡಿಸಿ, ರಾಜ್ಯ ದೇವದಾಸಿ ವಿಮೋಚನಾ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ದೇವದಾಸಿ ಮಹಿಳೆಯರು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸರ್ಕಾರ ದೇವದಾಸಿ ಮಹಿಳೆಯರಿಗೆ ಪ್ರತಿ ತಿಂಗಳೂ ನೀಡುತ್ತಿರುವ ಸಹಾಯಧನವನ್ನು ಕೇವಲ ರೂ.100 ಹೆಚ್ಚಿಸುವ ಮೂಲಕ ದೇವದಾಸಿ ಮಹಿಳೆಯರ ಬೇಡಿಕೆಗಳಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.

ಚಿಕ್ಕ ವಯಸ್ಸಿನಲ್ಲಿಯೇ ದೇವದಾಸಿ ಎಂಬ ಅನಿಷ್ಟ ಪದ್ಧತಿಗೆ ಸಿಲುಕಿ, ಅತಂತ್ರ ಸ್ಥಿತಿಯ ಜೀವನ ನಡೆಸುತ್ತಿದ್ದು, ನಿವೇಶನ, ವಸತಿ  ಹಾಗೂ ಮೂಲಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ದೇವದಾಸಿ ಎಂಬ ಅನಿಷ್ಟ ಪದ್ಧತಿ ನಿರ್ಮೂಲನೆ ಮಾಡಲು, ಜಾಗೃತಿ ಮೂಡಿಸುವ ಉದ್ದೇಶದಿಂದ ಹಲವಾರು ಸಂಘಗಳನ್ನು ಕಟ್ಟಿ  ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಳೆದ ಹಲವಾರು ವರ್ಷಗಳಿಂದ ಹೋರಾಟ ಮಾಡಲಾಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ತೀವ್ರ ತೊಂದರೆ ಅನುಭವಿಸುವಂತಾಗಿದ್ದು, ರಾಜ್ಯದ ಎಲ್ಲ ದೇವದಾಸಿ ಮಹಿಳೆಯರಿಗೆ ಪ್ರತಿ ತಿಂಗಳು ನೀಡುವ ಸಹಾಯಧನವನ್ನು ರೂ 1500ಕ್ಕೆ ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ.ಮಾಳಮ್ಮ, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಅಡಿವೆಪ್ಪ, ಕೆ.ನಾಗರತ್ನ, ಖಜಾಂಚಿ ವಿಶ್ವನಾಥ ಸ್ವಾಮಿ, ಸಾವಿತ್ರಮ್ಮ, ಎರೆಮ್ಮ, ಕಲಾವತಿ, ಕಮಲಮ್ಮ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.