ಬಳ್ಳಾರಿ: ‘ಸದೃಢ ಸಮಾಜ ನಿರ್ಮಿಸಲು ವ್ಯಾಜ್ಯಗಳ ಸಂಖ್ಯೆ ಕಡಿಮೆ ಮಾಡಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಕೆ.ಜಿ.ಶಾಂತಿ ಹೇಳಿದರು.
ನಗರದ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಡಿಯೊ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ಉದ್ದೇಶಿಸಿ ಮಾತನಾಡಿದರು.
‘ಸಾರ್ವಜನಿಕರು ಸಣ್ಣ ಪುಟ್ಟ ವ್ಯಾಜ್ಯಗಳಿಗೂ ನ್ಯಾಯಾಲಯದ ಬಾಗಿಲು ತಟ್ಟುತ್ತಿದ್ದಾರೆ. ಸಕಾಲದಲ್ಲಿ ನ್ಯಾಯ ದೊರಕಿಸಲು ನ್ಯಾಯಾಧೀಶರು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ’ ಎಂದು ತಿಳಿಸಿದರು.
‘ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ನ್ನು ಆಯೋಜಿಸಲಾಗಿದ್ದು, ಒಟ್ಟು 31 ಪೀಠಗಳನ್ನು ಸ್ಥಾಪಿಸಲಾಗಿದೆ. ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 16,284 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಗುರುತಿಸಲಾಗಿತ್ತು. ಈ ಪೈಕಿ 11,902 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು, ಒಟ್ಟು ₹44.06 ಕೋಟಿ ಮೊತ್ತದ ಪರಿಹಾರ ಸಂಗ್ರಹವಾಗಿದೆ’ ಎಂದರು.
ಕಕ್ಷಿದಾರರು ಹಾಗೂ ವಕೀಲರು ಪಾಲ್ಗೊಂಡು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಿಕೊಂಡರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.