ADVERTISEMENT

ಸರ್ಕಾರಿ ನೌಕರರೆಂದು ಘೋಷಣೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 9:10 IST
Last Updated 24 ಸೆಪ್ಟೆಂಬರ್ 2021, 9:10 IST
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ‘ಸ್ಕೀಂ ವರ್ಕರ್ಸ್‌ ಫೆಡರೇಶನ್‌ ಆಫ್‌ ಇಂಡಿಯಾ’ ಕಾರ್ಯಕರ್ತರು ಶುಕ್ರವಾರ ಹೊಸಪೇಟೆಯ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ‘ಸ್ಕೀಂ ವರ್ಕರ್ಸ್‌ ಫೆಡರೇಶನ್‌ ಆಫ್‌ ಇಂಡಿಯಾ’ ಕಾರ್ಯಕರ್ತರು ಶುಕ್ರವಾರ ಹೊಸಪೇಟೆಯ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಹೊಸಪೇಟೆ (ವಿಜಯನಗರ): ಕೋವಿಡ್‌ನಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ‘ಸ್ಕೀಂ ವರ್ಕರ್ಸ್‌ ಫೆಡರೇಶನ್‌ ಆಫ್‌ ಇಂಡಿಯಾ’ ಕಾರ್ಯಕರ್ತರು ಶುಕ್ರವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗೌರವ ಧನ, ಅರೆಕಾಲಿಕ ನೌಕರರು, ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರು ಕೋವಿಡ್‌ನಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಜೀವನ ಭದ್ರತೆ ಒದಗಿಸಬೇಕು. ನೌಕರಿ ಕಾಯಂಗೊಳಿಸಬೇಕು. ಸೋಂಕಿನಿಂದ ಆರೋಗ್ಯ ಕ್ಷೀಣಿಸಿದವರಿಗೆ ಸೂಕ್ತ ಪರಿಹಾರ ಕೊಡಬೇಕು ಎಂದು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಸಾರ್ವಜನಿಕ ಆರೋಗ್ಯ ಕ್ಷೇತ್ರ ಬಲಪಡಿಸಲು ಹೆಚ್ಚಿನ ಒತ್ತು ಕೊಡಬೇಕು. ಒಟ್ಟು ಜಿಡಿಪಿಯ ಶೇ 6ರಷ್ಟು ಅನುದಾನ ಆರೋಗ್ಯ ವಲಯಕ್ಕೆ ಮೀಸಲಿಡಬೇಕು. ಕೋವಿಡ್‌ ಹಾಗೂ ಕೋವಿಡೇತರ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು. ಕೆಲಸದ ವೇಳೆ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದವರಿಗೆ ₹50 ಲಕ್ಷ ಪರಿಹಾರ ವಿತರಿಸಬೇಕು ಎಂದು ಹಕ್ಕೊತ್ತಾಯ ಮಾಡಿದರು.

ADVERTISEMENT

ಕೋವಿಡ್‌ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಕೆಲಸ ನಿರ್ವಹಿಸುತ್ತಿರುವ ಎಲ್ಲರಿಗೂ ಮಾಸಿಕ ₹10,000 ಹೆಚ್ಚುವರಿ ಅಪಘಾತ ಭತ್ಯೆ ವಿತರಿಸಬೇಕು. ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಅಗತ್ಯ ಸುರಕ್ಷಾ ಸಲಕರಣೆಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಮಹೇಶ್ವರಿ, ಭುವನಾ, ಹೇಮಾವತಿ, ನಾಗರತ್ನ, ಗೌರಮ್ಮ, ಗೌರಿ, ರಾಜೇಶ್ವರಿ, ಅಶ್ವಿನಿ, ವಿಶಾಲಕ್ಷಿ, ಶ್ವೇತಾ, ಪಕ್ಕೀರಮ್ಮ, ಡಾ. ಪ್ರಮೋದ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.