
ಬಳ್ಳಾರಿ: ಶಾಸಕ ಗಾಲಿ ಜನಾರ್ಧನ ರೆಡ್ಡಿ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಒಡೆತನದ ಜಿ ಸ್ಕವೇರ್‌ನಲ್ಲಿರುವ ಮಾದರಿ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದನ್ನು ಖಂಡಿಸಿ ನಗರದ ಗಡಿಗಿ ಚೆನ್ನಪ್ಪ (ರಾಯಲ್) ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಶಾಸಕ ಭರತ್ ರೆಡ್ಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರು ರಾತ್ರೋ ರಾತ್ರಿ ಪ್ರತಿಭಟನೆ ಆರಂಭಿಸಿದ ಹಿನ್ನೆಲೆ ಸ್ಥಳಕ್ಕೆ ಧಾವಿಸಿದ ಎಎಸ್ಪಿಗಳಾದ ಕೆ.ಪಿ. ರವಿಕುಮಾರ್ ಹಾಗೂ ನವೀನ್ ಕುಮಾರ್ ಅವರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್ಆರ್‌ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.
ಪ್ರತಿಭಟನೆಯ ವೇಳೆ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ರಸ್ತೆಯ ಮಧ್ಯೆ ಟೈರ್‌ಗಳಿಗೆ ಬೆಂಕಿ ಹಚ್ಚಲು ಮುಂದಾದರು. ಪೊಲೀಸರು ವಿರೋಧಿಸಿದರು. ಈ ವೇಳೆ ಮಾತಿನ ಚಕಮಕಿ ನಡೆಯಿತು.
ಎಸ್ಪಿ ಭೇಟಿ: ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ಸ್ಥಳಕ್ಕೆ ಎಸ್ಪಿ ಸುಮನ್ ಪೆನ್ನೇಕರ್ ಭೇಟಿ ನೀಡಿ ದೂರು ಆಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಪಿ, ‘ಲೇಔಟ್‌ನ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಸದ್ಯಕ್ಕೆ ಘಟನೆಯ ಕುರಿತು ಮನವಿಯೊಂದನ್ನು ನೀಡಲಾಗಿದೆ. ದೂರು ಸ್ವೀಕರಿಸಿದ ಕೂಡಲೇ ತನಿಖೆ ಆರಂಭಿಸುತ್ತೇವೆ ಎಂದು ತಿಳಿಸಿದರು.
ಅಗ್ನಿ ಅವಘಡದ ಕುರಿತು ಈಗಾಗಲೇ ಪ್ರಾಥಮಿಕ ಮಾಹಿತಿ ಸಂಗ್ರಹಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದ್ದಾರೆ. ನಾಳೆ (ಶನಿವಾನಿ) ಸ್ಥಳಕ್ಕೆ ಭೇಟಿ ನೀಡಿ ಕೂಲಂಕಷವಾಗಿ ಪರಿಶೀಲಿಸಲಾಗುವುದು. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅಂತಹವರನ್ನು ಪತ್ತೆಹಚ್ಚಿ ಶೀಘ್ರವೇ ಬಂಧಿಸಲಾಗುವುದು ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಮಾಜಿ ಸಂಸದ ಸಣ್ಣ ಪಕ್ಕಿರಪ್ಪ, ಮಾಜಿ ಶಾಸಕ ಸುರೇಶ್ ಬಾಬು, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಮಾಜಿ ಬುಡಾ ಅಧ್ಯಕ್ಷ ಪಾಲಣ್ಣ, ಪಾಲಿಕೆ ಸದಸ್ಯರು ಹಾಗೂ ನೂರಾರು ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.