ADVERTISEMENT

ಬಳ್ಳಾರಿ | ಡಿಸೆಂಬರ್‌ಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಶರಣ ಪ್ರಕಾಶ್ ಆರ್.ಪಾಟೀಲ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 6:58 IST
Last Updated 16 ಅಕ್ಟೋಬರ್ 2025, 6:58 IST
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ್ದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಸಂಸ್ಥೆಯ ನಿರ್ದೇಶಕ ಗಂಗಾಧರ ಗೌಡ ಅವರಿಂದ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌ ಕೆ. ಸೇರಿದಂತೆ ಹಲವರು ಇದ್ದರು. 
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ್ದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಸಂಸ್ಥೆಯ ನಿರ್ದೇಶಕ ಗಂಗಾಧರ ಗೌಡ ಅವರಿಂದ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌ ಕೆ. ಸೇರಿದಂತೆ ಹಲವರು ಇದ್ದರು.    

ಬಳ್ಳಾರಿ: ‘ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ ಆರ್.ಪಾಟೀಲ ಭರವಸೆ ನೀಡಿದರು. 

ನಗರದ ಸುಧಾಕ್ರಾಸ್ ಬಳಿಯ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ, ಬಾಕಿ ಕಾಮಗಾರಿಗಳ ಕುರಿತು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಳಿಕ ಮಾತನಾಡಿದರು. 

‘450 ಹಾಸಿಗೆಯುಳ್ಳ ಆಸ್ಪತ್ರೆಯು 2008 ರಲ್ಲಿ ಮಂಜೂರಾಗಿತ್ತು. ವಿವಿಧ ಕಾರಣಗಳಿಂದ ನೆನೆಗುದಿಗೆ ಬಿದ್ದಿದ್ದ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳಿಸಲು 2018ರಲ್ಲಿ ಮರು ಟೆಂಡರ್ ಕರೆಯಲಾಗಿತ್ತು. ಈಗ ನಮ್ಮ ಸರ್ಕಾರಾವಧಿಯಲ್ಲೇ ಪೂರ್ಣಗೊಳಿಸಿ ಡಿಸೆಂಬರ್ ತಿಂಗಳಲ್ಲಿ ಉದ್ಘಾಟನೆ ಮಾಡಲಾಗುತ್ತಿದೆ’ ಎಂದು ಹೇಳಿದರು. 

ADVERTISEMENT

‘112.04 ಕೋಟಿಯ ಮೊದಲ ಹಂತ-1 ದ ಕಾಮಗಾರಿ ಶೇ.97 ರಷ್ಟು ಪೂರ್ಣಗೊಂಡಿದೆ. 24.38 ಕೋಟಿಯ ಎರಡನೇ ಹಂತದ ಕಾಮಗಾರಿಗಳೂ ಶೇ.96 ರಷ್ಟು ಮುಗಿದಿವೆ. ಈ ತಿಂಗಳ ಕೊನೆಯ ಹಂತದಲ್ಲಿ ವಿದ್ಯುತ್ ಕಾಮಗಾರಿ ಸೇರಿದಂತೆ ಬಾಕಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು’ ಎಂದು ಸಭೆಯಲ್ಲಿ ಗುತ್ತಿಗೆದಾರರಿಗೆ ತಾಕೀತು ಮಾಡಿದರು.

‘ಕಾರ್ಡಿಯಾಲಜಿ, ಪ್ಲಾಸ್ಟಿಕ್ ಸರ್ಜರಿ, ಡಯಾಲಿಸಿಸ್ ಯಂತ್ರ, ಆರ್‌ಒ ಪ್ಲಾಂಟ್, ಬೆಡ್ ವ್ಯವಸ್ಥೆ ಹಾಗೂ ಇತರೆ ಸಾಮಾಗ್ರಿ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ ಜನರಿಗೆ ಆರೋಗ್ಯ ಸೇವೆ ನೀಡಲು ಮುಂದಾಗಬೇಕು’ ಎಂದು ಸಚಿವರು ನಿರ್ದೇಶನ ನೀಡಿದರು.

‘ನ್ಯೂರಾಲಜಿ ಸೇರಿದಂತೆ ಆಸ್ಪತ್ರೆಯಲ್ಲಿ ಖಾಲಿಯಿರುವ ವಿವಿಧ ವಿಭಾಗಗಳ ವೈದ್ಯರು ಮತ್ತು ಗ್ರೂಪ್-ಬಿ, ಸಿ ಹುದ್ದೆಗಳನ್ನು ಗುತ್ತಿಗೆ ಆಧಾರದಡಿ ಪಡೆಯಲು ಕೂಡಲೇ ಕ್ರಮವಹಿಸಬೇಕು’ ಎಂದು ನಿರ್ದೇಶಕರಿಗೆ ಸೂಚನೆ ನೀಡಿದರು.

‘ಆಸ್ಪತ್ರೆಗೆ ಅನುದಾನದ ಕೊರತೆಯಾದಲ್ಲಿ ಡಿಎಂಎಫ್, ಕೆಎಂಇಆರ್‌ಸಿ ಹಾಗೂ ಸಿಎಸ್‌ಆರ್ ಅನುದಾನಕ್ಕಾಗಿ ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು’ ಎಂದೂ ಅವರು ಸೂಚಿಸಿದರು. 

‘ಕಳೆದ 2 ತಿಂಗಳುಗಳಿಂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗ ಕಾರ್ಯನಿರ್ವಹಿಸುತ್ತಿದೆ. ಇನ್ನೊಂದು ತಿಂಗಳಲ್ಲಿ ಒಳರೋಗಿ ವಿಭಾಗ ಆರಂಭಿಸಲಾಗುವುದು’ ಎಂದು ಬಿಎಂಸಿಆರ್‌ಸಿ ನಿರ್ದೇಶಕ ಡಾ.ಗಂಗಾಧರ ಗೌಡ ಅವರು ಸಚಿವರ ಗಮನಕ್ಕೆ ತಂದರು.

ಬಿಎಂಸಿಆರ್‌ಸಿ, ಟಿಬಿ ಆಸ್ಪತ್ರೆಗಳಲ್ಲಿ ಕೆಎಂಇಆರ್‌ಸಿ ಅನುದಾನದಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಅಗತ್ಯ ಸಲಹೆ ಸೂಚನೆ ನೀಡಿದರು.

26 ಎಕರೆ ಪ್ರದೇಶದಲ್ಲಿ ಕ್ಯಾನ್ಸರ್ ಆಸ್ಪತ್ರೆ : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಗುರುತಿಸಿದ 26 ಎಕರೆ ಪ್ರದೇಶದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಡಿಪಿಆರ್ ಸಿದ್ಧವಿದ್ದು, ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದು ಮಾಧ್ಯಮದವರಿಗೆ ತಿಳಿಸಿದರು.

ಬಳಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮುಸೇನ್, ಬೆಂಗಳೂರು ವೈದ್ಯಕೀಯ ನಿರ್ದೇಶನಾಲಯದ ನಿರ್ದೇಶಕಿ ಸುಜಾತ ರಾಠೋಡ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೇರ್ ಸೇರಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರು, ಪ್ರಾಂಶುಪಾಲರು, ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಯಾರ ಪ್ರಭಾವವೂ ನಡೆಯುವುದಿಲ್ಲ

ಬಿಎಂಸಿ–ಆರ್‌ಸಿ ನಿರ್ದೇಶಕ ಗಂಗಾಧರ ಗೌಡ ಅವರ ವಿರುದ್ದ ಹಲವು ಆರೋಪಗಳಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ಬಿಜೆಪಿಯ ಅಧಿಕಾರವಧಿಯ ಅಂತ್ಯದಲ್ಲಿ ನಿರ್ದೇಶಕರ ನೇಮಕಾತಿ ಆಗಿದೆ. ಅಮಾನತು ಮಾಡಲು ಪ್ರತ್ಯೇಕ ಪ್ರಕ್ರಿಯೆ ಇದೆ. ಹೀಗಾಗಿ ಇರುವವರಿಂದಲೇ ಕೆಲಸ ಮಾಡಿಸಬೇಕಾದ ಅನಿವಾರ್ಯತೆ ಇದೆ. ಯಾರೂ ನನ್ನ ಮೇಲೆ ಪ್ರಭಾವ ಬೀರುವ ಮಾತೇ ಇಲ್ಲ. ಹಾಗೇನಾದರೂ ಮಾಡಿದರೆ ವಜಾ ಮಾಡಲಾಗುವುದು’ ಎಂದು ಸ್ಪಷ್ಟಪಡಿಸಿದರು. 

ನಿರ್ದೇಶಕರಿಗೆ ತೀವ್ರ ತರಾಟೆ 

ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಗಳು ಟೆಂಡರ್‌ ಕೆಲವು ಪ್ರಸ್ತಾವನೆಗಳ ಕುರಿತು ಸಚಿವರಿಗೆ ಮಾಹಿತಿ ನೀಡುವಲ್ಲಿ ಬಿಎಂಸಿ–ಆರ್‌ಸಿ ನಿರ್ದೇಶಕ ಗಂಗಾಧರ ಗೌಡ ತಡಬಡಾಯಿಸಿದರು. ಇದರಿಂದ ಆಕ್ರೋಶಗೊಂಡ ಸಚಿವ ಶರಣಪ್ರಕಾಶ ಪಾಟೀಲ ಅಮಾನತು ಮಾಡುವುದಾಗಿ ಎಚ್ಚರಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.