
ಬಳ್ಳಾರಿ: ‘ನಗರದ ಟ್ರಾಫಿಕ್ ಸಮಸ್ಯೆಗೆ ಹಂತ- ಹಂತವಾಗಿ ಪರಿಹಾರ ಕಲ್ಪಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್ ಅವರು ಹೇಳಿದರು.
ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಚಾರ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.
‘ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ. ಆಟೋ, ಲಾರಿ, ಕಿರಾಣಿ ಅಂಗಡಿ- ಬೀದಿ ಬದಿ ವ್ಯಾಪಾರಸ್ಥರು ಹಾಗೂ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳ ಕೈಜೋಡಿಸುವಿಕೆಯೂ ಮುಖ್ಯ’ ಎಂದರು.
‘ನಗರದ ಟ್ರಾಫಿಕ್ ಸಮಸ್ಯೆಗಳನ್ನು ಆಲಿಸಲು ಈ ಸಭೆಯು ಉಪಯುಕ್ತವಾಗಿದೆ. ಸಮಸ್ಯೆಗಳನ್ನು ಅರಿತು ಹಂತ- ಹಂತವಾಗಿ ಪರಿಹಾರ ಕಲ್ಪಿಸಲಾಗುವುದು’ ಎಂದರು.
‘ವಾಹನ ಸವಾರರು ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಮಾತನಾಡಿ, ‘ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತ, ಬಡಾವಣೆಗಳಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯವಿದೆ’ ಎಂದರು.
‘ನಗರದಲ್ಲಿ ಆಟೋ ಚಾಲಕರು ನಿಧಾನಗತಿಯಲ್ಲಿ ವಾಹನ ಚಲಾಯಿಸಬೇಕು. ನಡುರಸ್ತೆಯಲ್ಲಿ ಬ್ರೇಕ್ ಹಾಕುವುದು, ಹಿಂಬದಿ ಸವಾರರಿಗೆ ತೊಂದರೆ ಉಂಟುಮಾಡುವುದು ಮಾಡಬಾರದು. ಹಾಗಾಗಿ ನಿಧಾನಗತಿಯಲ್ಲಿ ವಾಹನ ಚಲಾವಣೆ ಮಾಡಬೇಕು’ ಎಂದರು.
ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಮಾರ್ಗ ಕಂಡುಕೊಳ್ಳಲು ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದ ಟ್ರಾಫಿಕ್ ಸಮಸ್ಯೆಗಳ ಕುರಿತು ಸಾರ್ವಜನಿಕರೂ ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಪಿ.ರವಿಕುಮಾರ್, ನವೀನ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಜಾಮುದ್ದೀನ್ ಶರೀಫ್, ಲೋಕೋಪಯೋಗಿ ಇಲಾಖೆಯ ಅಭಿಯಂತರ ಬಸರೆಡ್ಡಿ, ಸಂಚಾರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ರುದ್ರಪ್ಪ, ಕೆಕೆಆರ್‌ಟಿಸಿ, ಕೆಇಬಿ ಅಧಿಕಾರಿಗಳು ಇದ್ದರು.
ಟ್ರಾಫಿಕ್ ನಿಯಂತ್ರಣಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಜನ ಸ್ವಯಂ ಪ್ರೇರಿತರಾಗಿ ಟ್ರಾಫಿಕ್ ವಾರ್ಡನ್‌ಗಳಾಗಿ ಕೆಲಸ ಮಾಡಲು ಅವಕಾಶವಿದೆ. ಆಸಕ್ತರು ನೋಂದಾಯಿಸಿಕೊಳ್ಳಬಹುದು– ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.