
ಬಳ್ಳಾರಿ ದೊಂಬಿ ಪ್ರಕರಣದ ಆರೋಪಿಗಳನ್ನು ಕರೆದೊಯ್ಯುತ್ತಿರುವುದು
ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಬಂಧಿತ 26 ಆರೋಪಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು.
ಬಂಧಿತರನ್ನು ಬಿಗಿ ಭದ್ರತೆಯಲ್ಲಿ ಬಳ್ಳಾರಿಯಿಂದ ಕರೆತಂದು ಎಲ್ಲ ಆರೋಪಿಗಳನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು, ‘ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದು’ ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದರು. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ಅದಾದ ಬಳಿಕ ಆರೋಪಿಗಳನ್ನು ಜೈಲಿಗೆ ಕಳುಹಿಸಲಾಯಿತು.
ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಅವರ ಬಳ್ಳಾರಿಯಲ್ಲಿರುವ ಮನೆಯ ಮುಂದೆ ಘರ್ಷಣೆ ನಡೆದಿತ್ತು.ಈ ಪ್ರಕರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಸೇರಿದ ಒಟ್ಟು 26 ಜನರನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.