ಕೂಡ್ಲಿಗಿ: ‘ಹೋಬಳಿ ಕೇಂದ್ರವಾದ ಕಾನಹೊಸಹಳ್ಳಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ’ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.
ತಾಲ್ಲೂಕಿನ ಕಾನಹೊಸಹಳ್ಳಿಯಲ್ಲಿ ಸೋಮವಾರ ಡಿ. ದೇವರಾಜ್ ಅರಸ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಸಹಳ್ಳಿಯೂ ತೀವ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ ತಕ್ಕಂತೆ ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ಈ ಭಾಗದಿಂದ ಶಿಕ್ಷಣಕ್ಕಾಗಿ ಬರುವ ಬಾಲಕಿಯರ ವಸತಿ ನಿಲಯವನ್ನು ಇದುವರೆಗೂ ಖಾಸಗಿ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ಆದ್ದರಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ₹5 ಕೋಟಿ ಅನುದಾನದಲ್ಲಿ ಸುಸಜ್ಜಿತ ವಸತಿ ನಿಲಯ ನಿರ್ಮಾಣ ಮಾಡಲಾಗುತ್ತದೆ. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಬೇಕು’ ಎಂದು ಹೇಳಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಸಿದ್ದನಗೌಡ, ಉಪಾಧ್ಯಕ್ಷೆ ಲಕ್ಷ್ಮೀರಜನಿಕಾಂತ್, ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಯ್ಯ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಶಶಿಕಲಾ, ತಾಲ್ಲೂಕು ಕಲ್ಯಾಣಾಧಿಕಾರಿ ಶ್ಯಾಮ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ನರಸಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಮಾರ್ ಗೌಡ, ಎಳನೀರು ಗಂಗಣ್ಣ, ಬಿ. ಜಗದೀಶ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿನಯ್ ಹಾಗೂ ಪಂಚಾಯ್ತಿ ಸದಸ್ಯರು, ವಸತಿ ನಿಲಯದ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.