ADVERTISEMENT

ಹೊರಗುತ್ತಿಗೆ ನೌಕರರ ಸಂಬಳಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2019, 9:12 IST
Last Updated 14 ಜನವರಿ 2019, 9:12 IST
ಹೊಸಪೇಟೆಯ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಕಚೇರಿ ಎದುರು ಸೋಮವಾರ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ
ಹೊಸಪೇಟೆಯ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಕಚೇರಿ ಎದುರು ಸೋಮವಾರ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ತಕ್ಷಣ ಸಂಬಳ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದವರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತೀರ್ಣಾಧಿಕಾರಿ ಯರ್ರಿಸ್ವಾಮಿಗೆ ಮನವಿ ಪತ್ರ ಸಲ್ಲಿಸಿದರು.

‘13 ಜನ ಹೊರಗುತ್ತಿಗೆ ನೌಕರರಿಗೆ ಏಳು ತಿಂಗಳಿಂದ ಸಂಬಳ ಕೊಟ್ಟಿಲ್ಲ. ಇದರಿಂದ ಅವರು ಜೀವನ ನಡೆಸುವುದು ಕಷ್ಟವಾಗಿದೆ. ಏಜೆನ್ಸಿಗಳಿಂದ ಪಿ.ಎಫ್‌., ಇ.ಎಸ್‌.ಐ. ಹಣದ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿ ನೌಕರರಿಗೆ ಕೊಡಬೇಕು. ಹೊಸದಾಗಿ ಹೊರಗುತ್ತಿಗೆ ನೌಕರರನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದು’ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ADVERTISEMENT

‘ಹೊರಗುತ್ತಿಗೆ ನೌಕರರ ಸೇವಾ ಅವಧಿ ಪರಿಗಣಿಸಿ ಜೇಷ್ಠತಾ ಪಟ್ಟಿ ತಯಾರಿಸಬೇಕು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಸ್ನಾತಕೋತ್ತರ ಮಹಿಳಾ ಮತ್ತು ಪುರುಷರ ಹಾಸ್ಟೆಲ್‌ನಲ್ಲಿ ಸೇವೆ ಸಲ್ಲಿಸುತ್ತಿರುವ 16 ಹೊರಗುತ್ತಿಗೆ ನೌಕರರಿಗೆ 15 ತಿಂಗಳಿಂದ ಸಂಬಳವಾಗಿಲ್ಲ. ಜಿಲ್ಲಾಧಿಕಾರಿ ಹಣ ಬಿಡುಗಡೆ ಮಾಡಿದ್ದರೂ ಏಜೆನ್ಸಿಯವರು ಸಂಬಳ ಕೊಟ್ಟಿಲ್ಲ ಎನ್ನುವ ಮಾಹಿತಿ ಇದೆ. ಅದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಸಂಘದ ತಾಲ್ಲೂಕು ಅಧ್ಯಕ್ಷ ಮರಡಿ ಜಂಬಯ್ಯ ನಾಯಕ, ಕಾರ್ಯದರ್ಶಿ ಬಿ. ರಮೇಶ್‌ ಕುಮಾರ್‌, ಸಂಘಟನಾ ಕಾರ್ಯದರ್ಶಿ ಎಸ್‌. ಸತ್ಯಮೂರ್ತಿ, ಖಜಾಂಚಿ ಎಂ. ಲಕ್ಷ್ಮಿದೇವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.