ಡಾ. ಸುನೀಲ್
ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಸುನೀಲ್ ಎಂಬುವವರನ್ನು ದುಷ್ಕರ್ಮಿಗಳು ಶನಿವಾರ ಮುಂಜಾನೆ 6 ಗಂಟೆ ಸುಮಾರಿನಲ್ಲಿ ಅಪಹರಿಸಿದ್ದಾರೆ.
ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ. ಸುನೀಲ್ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು ₹6 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಗೊತ್ತಾಗಿದೆ.
ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
‘ಬಳ್ಳಾರಿ ಹೊರ ವಲಯದ ಮೋಕಾ ಕಡೆಗೆ ಅಪಹರಣಕಾರರು ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಮಾರ್ಗದ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ಜಿಲ್ಲೆಯ ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ತನಿಖೆಯಲ್ಲಿ ತೊಡಿಗಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಸ್ಥಳ ಪರಿಶೀಲನೆ ನಡೆಸಿದ್ದು, ತನಿಖಾ ತಂಡಕ್ಕೆ ಸಲಹೆ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.